ಕೋವಿಡ್ ಲಸಿಕೆ ವ್ಯವಸ್ಥಿತ ವಿತರಣೆಗೆ ಜಿಲ್ಲಾಧಿಕಾರಿಗಳ ಸೂಚನೆ….

ಕೋವಿಡ್ ಲಸಿಕೆ ವ್ಯವಸ್ಥಿತ ವಿತರಣೆಗೆ ಜಿಲ್ಲಾಧಿಕಾರಿಗಳ ಸೂಚನೆ….


ಚಿತ್ರದುರ್ಗ:


 ಜಿಲ್ಲೆಯಲ್ಲಿ ಇದೇ 16 ರಂದು ಮೊದಲ ಹಂತದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಹಾಗೂ ಪ್ರೆಂಟ್‍ಲೈನ್ ವರ್ಕರ್ಸ್‍ಗೆ ಕೋವಿಡ್-19 ಲಸಿಕೆ ನೀಡಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವ ಮೂಲಕ ಲಸಿಕೆಯನ್ನು ವ್ಯವಸ್ಥಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ಹೆಲ್ತ್ ವರ್ಕರ್ಸ್ ಹಾಗೂ ಪ್ರೆಂಟ್‍ಲೈನ್ ವರ್ಕರ್ಸ್‍ಗೆ ಕೋವಿಡ್ ಲಸಿಕೆ ನೀಡುವ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಜನ ಸಂದಣಿ ಉಂಟಾಗದಂತೆ ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆಗೆ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
  ಲಸಿಕೆಯನ್ನು ಸಂಗ್ರಹಿಸಿಡಲು ಜಿಲ್ಲೆಯಲ್ಲಿ ಪ್ರಾದೇಶಿಕ ದಾಸ್ತಾನು ಕೇಂದ್ರವನ್ನು ತೆರೆಯಲಾಗಿದ್ದು, ಈ ಕೇಂದ್ರದಿಂದ ಬಳ್ಳಾರಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಿಗೆ ಲಸಿಕೆ ಪೂರೈಕೆಯಾಗಲಿದೆ. ಲಸಿಕೆ ಪೂರೈಕೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗಬಾರದು. ವ್ಯವಸ್ಥಿತವಾಗಿ ಲಸಿಕೆ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.  
  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಾಲಾಕ್ಷ ಮಾತನಾಡಿ, ಕೋವಿಡ್ ಲಸಿಕೆ ವಿತರಣೆಯು ಜನವರಿ 16 ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯಲ್ಲಿ ಮೂರು ಹಂತದಲ್ಲಿ ಲಸಿಕೆ ನೀಡಲಾಗುತ್ತಿದ್ದು, ಮೊದಲ ಹಂತದಲ್ಲಿ ಹೆಲ್ತ್ ವರ್ಕರ್ಸ್ ಹಾಗೂ ಪ್ರೆಂಟ್‍ಲೈನ್ ವರ್ಕರ್ಸ್‍ಗೆ ಲಸಿಕೆ ನೀಡಲಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 15,680 ಫಲಾನುಭವಿಗಳು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಸರ್ಕಾರಿ ಸಂಸ್ಥೆಯ 8,760 ಫಲಾನುಭವಿಗಳು ಹಾಗೂ ಖಾಸಗಿ ಆರೋಗ್ಯ ಸಂಸ್ಥೆಯ 6920 ಫಲಾನುಭವಿಗಳು ಇದ್ದಾರೆ ಎಂದರು.
 ಲಸಿಕೆ ನೀಡಲು 197 ಸ್ಟೇಷನ್‍ಗಳನ್ನು ಮಾಡಲಾಗಿದ್ದು, ಇದಕ್ಕಾಗಿ 187 ಲಸಿಕಾಧಿಕಾರಿಗಳು ಇದ್ದಾರೆ. ಜಿಲ್ಲೆಯ 106 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
 ಜಿಲ್ಲೆಯಲ್ಲಿ ಈಚೆಗೆ ನಡೆದ ಕೋವಿಡ್ ಲಸಿಕೆಯ ಡ್ರೈರನ್ ಲಸಿಕಾ ಅಧಿವೇಶನವು ಯಶಸ್ವಿಯಾಗಿದ್ದು, ಕೋವಿಡ್ ಲಸಿಕೆ ಪಡೆದವರಿಗೆ ವೇಟಿಂಗ್ ಹಾಲ್, ಲಸಿಕಾ ಕೊಠಡಿ, ನಿಗಾವಣೆ ಕೊಠಡಿ ಸೇರಿದಂತೆ ಲಸಿಕೆಗಾಗಿ ಮೂರು ಕೊಠಡಿಗಳು ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಕಿರಿಯ ಆರೋಗ್ಯ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.
 ಕೋವಿಡ್ ಲಸಿಕೆ ದಾಸ್ತಾನಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಾದೇಶಿಕ ಕೇಂದ್ರ ಪ್ರಾರಂಭಿಸಲಾಗಿದ್ದು, ಇಲ್ಲಿನ ದಾಸ್ತಾನು ಕೇಂದ್ರದಲ್ಲಿ ಸುಮಾರು 30 ಲಕ್ಷ ಡೋಸ್‍ನ್ನು ಸಂಗ್ರಹಿಸಿಡಲು ಅವಕಾಶವಿದೆ. ಶೀಘ್ರದಲ್ಲಿಯೇ ಲಸಿಕೆ ಜಿಲ್ಲೆ ತಲುಪಲಿದೆ ಎಂದರು.
ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಆರು ಕಡೆ ನಡೆದ ಕೋವಿಡ್ ಲಸಿಕೆ ಡ್ರೈರನ್ ಯಶಸ್ವಿಯಾಗಿದೆ. ಕೋವಿಡ್ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು.
 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ರಾಜ್ಯ ಸರ್ವೇಕ್ಷಣಾಧಿಕಾರಿ ಡಾ.ಶ್ರೀಧರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್, ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧೀಕ್ಷಕ ಡಾ.ಪಾಲಾಕ್ಷಯ್ಯ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: