i
ರಾಜ್ಯಾದ್ಯಂತ ಇನ್ನೂ 3-4 ದಿನ ಭಾರೀ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ಮುಂದಿನ ಮೂರು-ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾತಾವರಣದಲ್ಲಿನ ತಾಪಮಾನ ವ್ಯತ್ಯಾಸಗಳಾಗುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.