i
ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಸೇರ್ತಾರಾ…?
ಚಂದ್ರವಳ್ಳಿ ನ್ಯೂಸ್ ಬೆಳಗಾವಿ:
ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಜೆಡಿಎಸ್ ಪಕ್ಷಕ್ಕೆ ಬರುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆಹ್ವಾನ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ರಮೇಶ್ ಜಾರಕಿಹೊಳಿ ಜೆಡಿಎಸ್ ಗೆ ಬಂದರೆ ಸ್ವಾಗತ. ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ರಮೇಶ್ ಜಾರಕಿಹೊಳಿ ಸೇರಿದಂತೆ ಯಾವುದೇ ಪಕ್ಷದ ಯಾರೇ ನಾಯಕರು ಬಂದರೂ ಸ್ವಾಗತ ಎಂದು ತಿಳಿಸಿದರು. ಸಿ.ಎಂ.ಇಬ್ರಾಹಿಂ ಅವರ ಬಹಿರಂಗ ಆಹ್ವಾನಕ್ಕೆ ರಮೇಶ್ ಜಾರಕಿಹೊಳಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ ರಾಜಕೀಯದಲ್ಲಿ ಯಾವುದನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ.
ಜೆಡಿಎಸ್ ಪಕ್ಷವು 2023ರ ವಿಧಾನಸಭಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬರುತ್ತಿದ್ದಾರೆ. ರಾಜ್ಯದ ಎಲ್ಲ ಭಾಗದಲ್ಲಿ ಜನರು ಸಾವಿರಾರು ಸಂಖ್ಯೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿರುವ ಜಾತಿ ಜನಾಂಗಗಳು ಸೇರಿದಂತೆ ಎಲ್ಲ ಸಮಾಜದವರನ್ನು ಜೆಡಿಎಸ್ ಪಕ್ಷವು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಇಬ್ರಾಹಿಂ ಅವರು ವಿಶ್ವಾಸ ವ್ಯಕ್ತಪಡಿಸಿದರು.