i
ಕಬ್ಬಳ ಗ್ರಾಮ ಮತ್ತು ಅಂಗನವಾಡಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಹೊಸದುರ್ಗ ತಾಲ್ಲೂಕಿನ ದೇವಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಬ್ಬಳ ಗ್ರಾಮದ ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಬ್ಬಳ ಗ್ರಾಮದ ಶಾಲೆ ಹಾಗೂ ಅಂಗನವಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಕ್ಕಳ ಹಾಜರಾಗಿ ಕುರಿತು ಮೊದಲಿಗೆ ಮಾಹಿತಿ ಪಡೆದುಕೊಂಡರು, ಬಳಿಕ ಶಾಲೆಯ ಅಡುಗೆ ಕೋಣೆ, ಶೌಚಾಲಯ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲೆಯಲ್ಲಿ ಮಕ್ಕಳಿಗೆ ನೀಡುವ ಬಿಸಿಯೂಟದ ಆಹಾರ ಪದಾರ್ಥಗಳಾದ ಬೆಳೆ, ಅಕ್ಕಿ, ತರಕಾರಿ ಇತ್ಯಾದಿಗಳನ್ನು ಪರಿಶೀಲಿಸಿದ ಅವರು, ಸರ್ಕಾರದ ನಿಯಮಾನುಸಾರವಾಗಿ ನಿಗದಿತ ಪ್ರಮಾಣದಷ್ಟು ಆಹಾರಧಾನ್ಯವನ್ನು ಬಳಸಬೇಕು, ಮಕ್ಕಳಿಗೆ ಗುಣಮಟ್ಟದ, ಶುಚಿರುಚಿಯಾದ ಮಧ್ಯಾಹ್ನದ ಬಿಸಿಯೂಟ ನೀಡಬೇಕು. ವಿಶೇಷವಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಆಹಾರ ತಯಾರಿಸಬೇಕು ಎಂದು ಅಡುಗೆ ಸಿಬ್ಬಂದಿಗೆ ಹಾಗೂ ಸಂಬಂಧಪಟ್ಟ ಶಿಕ್ಷಕರುಗಳಿಗಹೆ ತಾಕೀತು ಮಾಡಿದರು.
ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯವಿದ್ದು, ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಳು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ಆರ್ಎಡಿಎಫ್ನಲ್ಲಿ ನಿರ್ಮಾಣವಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣವನ್ನು ಪರಿಶೀಲಿಸಿ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆ, ಚಿಕ್ಕಿ ಮುಂತಾದ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಇಂಗ್ಲಿಷ್ ಭಾಷಾ ಕಲಿಕೆಯಲ್ಲಿ ಸಮಸ್ಯೆಗಳಿದ್ದರೆ, ಅವುಗಳನ್ನು ನಿವಾರಿಸಿಕೊಳ್ಳುವ ಕೌಶಲ್ಯ ಬೆಳೆಸಿಕೊಂಡು, ಯಾವುದೇ ಮುಜುಗರವಿಲ್ಲದೆ ಇಂಗ್ಲಿಷ್ ಭಾಷೆಯಲ್ಲಿ ಉತ್ತಮ ಪ್ರೌಢಿಮೆ ಬೆಳೆಸಿಕೊಳ್ಳಬೇಕು. ಪ್ರತಿನಿತ್ಯವೂ ಪಾಠಗಳ ಅಧ್ಯಯನ ಮಾಡುವ ವಿಧಾನದ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕಬ್ಬಳ ಗ್ರಾಮದ ಗ್ರಾಮಸ್ಥರೊಂದಿಗೆ ಗ್ರಾಮದ ವಿವಿಧೆಡೆ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆ, ಅಹವಾಲು ಆಲಿಸಿದರು. ನಂತರ ಗ್ರಾಮದ ಸ್ವಚ್ಛತೆಗೆ ಸಂಬಂಧಪಟ್ಟಂತೆ ಸೊಳ್ಳೆ ಮುಕ್ತ ಗ್ರಾಮವನ್ನಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸುವಂತೆ ತಾಕೀತು ಮಾಡಿದರು.
ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿದ ಅವರು, ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಬಂದಾಗ, ಸಮಸ್ಯೆಗೆ ಪರಿಹಾರ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲು ದೂರವಾಣಿ ವಿವರ ಒಳಗೊಂಡ ಮಾಹಿತಿ ಫಲಕವನ್ನು ಸ್ಥಳದಲ್ಲಿ ಅಳವಡಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ, ಆರ್ಓ ಘಟಕ ದುರಸ್ತಿಗೆ ಬಂದಾಗ 24 ಗಂಟೆಯೊಳಗೆ ದುರಸ್ತಿ ಕಾರ್ಯಕೈಗೊಂಡು ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದು ಹೇಳಿದರು.
ಗ್ರಾಮದ ರಸ್ತೆಯು ಒತ್ತುವರಿಯಾಗಿರುವ ಕುರಿತು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು, ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ರಸ್ತೆಯನ್ನು ಅಳತೆ ಮಾಡಿ, ಒಂದು ವೇಳೆ ಒತ್ತುವರಿಯಾಗಿದ್ದರೆ ನಿಯಮಾನುಸಾರ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರಿಗೆ ಸೂಚನೆ ನೀಡಿದರು.
ಹೊಸದುರ್ಗ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ನಂತರ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಹೊಸದುರ್ಗ ತಹಸಿಲ್ದಾರ್ ಮಲ್ಲಿಕಾರ್ಜುನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.