i
ಪಂಚಮಸಾಲಿ 2ಎ ಮೀಸಲಾತಿ, ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್, ಇಂದು ಮತ್ತೆ ವಿಚಾರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಎಂದು ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಬೆಂಗಳೂರಿನ ಡಿ.ಜಿ ರಾಘವೇಂದ್ರ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಷಿ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಮಂಗಳವಾರ (ಡಿ.27) ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 29ರಂದು ಗುರುವಾರ ಮತ್ತೆ ವಿಚಾರಣೆ ಮುಂದುವರೆಯಲಿದೆ.
ಈಗಾಗಲೇ ಹಿಂದುಳಿದ ವರ್ಗಗಳ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಇದೇ ವೇಳೆ ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ. ಪಂಚಮಸಾಲಿ ಜಾತಿಯನ್ನು ಪ್ರವರ್ಗ 2-ಎ ಗೆ ಸೇರಿಸಬೇಕು ಎಂಬ ಬೇಡಿಕೆಯನ್ನು 2000ರಲ್ಲೇ ಹಿಂದುಳಿದ ವರ್ಗಗಳ ಆಯೋಗ ತಿರಸ್ಕರಿಸಿದೆ. ಈಗ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿದ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುತ್ತಿರುವುದು ಕಾನೂನು ಬಾಹಿರ ಕ್ರಮ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಎಚ್.ವಿ. ಮಂಜುನಾಥ್ ಅರ್ಜಿದಾರರ ಪರ ವಕಾಲತ್ತು ವಹಿಸಿದ್ದು, ಹೈಕೋರ್ಟ್ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು ನ್ಯಾಯಪೀಠದ ಮುಂದೆ ವಾದ ಮಂಡಿಸಿದ್ದಾರೆ.