
ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ರದ್ದು ಮಾಡಿದ ಹೈಕೋರ್ಟ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಇತ್ತೀಚೆಗೆ ನೇಮಕವಾಗಿದ್ದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿ ಆದೇಶಿಸಿದೆ.
ಆಯ್ಕೆ ಪಟ್ಟಿ ಪ್ರಶ್ನಿಸಿ 90ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿ ರದ್ದು ಪಡಿಸಿದೆ.
ಹೈಕೋರ್ಟ್ ನ್ಯಾಯಾಲಯದಲ್ಲಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಸಮರ್ಥವಾದ ವಾದ ಮಂಡಿಸಿ, ಪತಿಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಇದು ನಿಯಮ ಬಾಹಿರವಾಗಿದೆ. ಕಾನೂನು ಬಾಹಿರವಾಗಿರುವಂತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿದ್ದರು. ಅಲ್ಲದೆ ತಂದೆಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಪೀಠಕ್ಕೆ ಸೂಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟಿಸಿದ್ದ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.