i
ಕಾಯಕ ಶರಣರ ಜಯಂತಿ ಅರ್ಥಪೂರ್ಣ ಆಚರಣೆ–ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತದ ವತಿಯಿಂದ ಇದೇ ಫೆಬ್ರವರಿ 18ರಂದು ಮಹಾ ಶಿವರಾತ್ರಿ ದಿನದಂದು ಕಾಯಕ ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕಾಯಕ ಶರಣರ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ನಗರದ ಪತ್ರಕರ್ತರ ಭವನದಲ್ಲಿ ಫೆ.18ರಂದು ಬೆಳಿಗ್ಗೆ 11ಕ್ಕೆ ಕಾಯಕ ಶರಣರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಷ್ಟಾಚಾರದ ಅನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಜಯಂತಿ ಅಂಗವಾಗಿ ಅಂದು ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ವಚನಗಳ ಕುರಿತು ಗೀತಗಾಯನ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಕಾಯಕರ ಶರಣರ ಆದರ್ಶ, ಚಿಂತನೆ ಹಾಗೂ ಸಮಾಜಕ್ಕೆ ಅವರ ಕೊಡುಗೆ ತಿಳಿಸುವ ನಿಟ್ಟಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಮುಖಂಡರಾದ ಬಿ.ರಾಜಪ್ಪ ಮಾತನಾಡಿ, ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಂಬೇಡ್ಕರ್ ಪ್ರತಿಮೆಯಿಂದ ಪತ್ರಕರ್ತರ ಭವನದವರೆಗೂ ಕಲಾ ತಂಡಗಳಿಂದ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸುವಂತೆ ಎಂದು ಸಭೆಗೆ ತಿಳಿಸಿದರು.
ನಗರಸಭಾ ಮಾಜಿ ಅಧ್ಯಕ್ಷ ಡಿ.ಎನ್.ಮೈಲಾರಪ್ಪ ಮಾತನಾಡಿ, ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ನಗರಸಭಾ ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.