i
ಜಿಪಂ ತಾಪಂ ಕ್ಷೇತ್ರಗಳ ಗಡಿ ಮತ್ತು ಮೀಸಲಾತಿ ಕುರಿತ ಪ್ರಕರಣ ಫೆ.14ಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಪರಿಷ್ಕರಣೆ ಮತ್ತು ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣ ಆಯೋಗದಿಂದ ಹಿಂಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.14ಕ್ಕೆ ಮುಂದೂಡಿದೆ.
ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಅರ್ಜಿಯು ಹಿರಿಯ ನ್ಯಾಯಾಧೀಶರಾದ ಆಲೋಕ್ ಆರಾಧೆ ಮತ್ತು ನ್ಯಾಯಾಧೀಶರಾದ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು.
ಸರ್ಕಾರದ ಪರ ಹಾಜರಾದ ವಕೀಲರು, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಬೇಕಿತ್ತು, ಆದರೆ ಅವರು ಈ ದಿನ ಲಭ್ಯರಿಲ್ಲದ ಕಾರಣ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿ ಆದೇಶಿಸಿದೆ.