i
ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಏಪ್ರಿಲ್-1ರೊಳಗೆ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿಯನ್ನು ಏಪ್ರಿಲ್ 1ರ ವೇಳೆಗೆ ಪ್ರಕಟಿಸುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಅವರು ಮೀಸಲಾತಿ ಪ್ರಕಟಿಸುವ ಕುರಿತು ಮಾಹಿತಿ ನೀಡಿದರು.
ಮಾರ್ಚ್-1ರಂದು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಜೊತೆಗೆ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏಪ್ರಿಲ್-1ರವರೆಗೆ ಕಾಲಾವಕಾಶ ನೀಡಿದೆ. ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು. ನ್ಯಾಯಪೀಠ ಸರ್ಕಾರ ನೀಡಿದ ಅಂಶಗಳನ್ನು ದಾಖಲಿಸಿಕೊಂಡು ಏಪ್ರಿಲ್-12ಕ್ಕೆ ವಿಚಾರಣೆ ಮುಂದೂಡಿತು.