i
ಮುರುಘಾ ಶರಣರಿಗೆ ಆರೋಗ್ಯ ಸಮಸ್ಯೆ, ಏಪ್ರಿಲ್-6ಕ್ಕೆ ವಿಚಾರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಪೊಲೀಸ್ ವ್ಯಾನಿನಲ್ಲಿ ಕರೆತಂದು ಚಿಕಿತ್ಸೆ ಕೊಡಿಸಿ ನಂತರ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಮುರುಘಾ ಶರಣರ ಆರೋಗ್ಯದಲ್ಲಿ ಸಮಸ್ಯೆ ಇದ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಏ.6ರಂದು ವಿಚಾರಣೆ-
ಇಲ್ಲಿನ ಮುರುಘಮಠದ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ ಮತ್ತು ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಪ್ರಶ್ನಿಸಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 6ಕ್ಕೆ ಮುಂದೂಡಿದೆ. ಈ ಸಂಬಂಧದ ಎರಡು ಪ್ರತ್ಯೇಕ ರಿಟ್ ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆ ನಿಗದಿಯಾಗಿದ್ದವು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಹಿರೇಮಠ ಅವರು, ಪ್ರಕರಣದ ವಾದ ಮಂಡಿಸಬೇಕಿರುವ ಹಿರಿಯ ವಕೀಲ ಸಿ.ವಿ.ನಾಗೇಶ್ ಗೈರಾಗಿರುವ ಕಾರಣ ವಿಚಾರಣೆ ಮುಂದೂಡಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆ ಏಪ್ರಿಲ್ 6ಕ್ಕೆ ನಿಗದಿಪಡಿಸಿದೆ.