i
ಶಿವು ಯಾದವ್ ಇವರನ್ನು ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಡುಗೊಲ್ಲ ಸಮುದಾಯ ರಾಜ್ಯಾಧ್ಯಕ್ಷ, ಖ್ಯಾತ ವಕೀಲ, ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಶಿವುಯಾದವ್ರವರನ್ನು ಕಾಡು ಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಚಳ್ಳಕೆರೆ ತಾಲೂಕು ಮಾಜಿ ವಕೀಲರ ಸಂಘದ ಅಧ್ಯಕ್ಷ ಟಿ.ತಮ್ಮಣ್ಣ ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಾಡುಗೊಲ್ಲ ಸಮುದಾಯದ ರಕ್ಷಣೆ, ಸಮಗ್ರ ಅಭಿವೃದ್ಧಿ, ಮೀಸಲಾತಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿರುವ ಸಿ.ಶಿವುಯಾದವ್ರವರು ಹಿರಿಯ ಕಾಂಗ್ರೆಸ್ ಮುಖಂಡರಾಗಿರುತ್ತಾರೆ. ಸುಮಾರು 35 ವರ್ಷಗಳಿಂದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಪದಾಧಿಕಾರಿಗಳಾಗಿ ಪಕ್ಷ ಸಂಘಟನೆ ಮಾಡಿರುತ್ತಾರೆ. ೨೦೨೧-೨೨ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡು ಜಿಲ್ಲಾ ಕಾಂಗ್ರೆಸ್ನಲ್ಲಿ ಸೇವೆ ಸಲ್ಲಿಸಿರುತ್ತಾರೆ. ನಂತರ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಾಹಿಸಿರುತ್ತಾರೆ. ಅವರು ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾಗಿ ರಾಜ್ಯಾದ್ಯಂತ ಕಾಡುಗೊಲ್ಲರನ್ನು ಸಂಘಟಿಸಿದ್ದಾರೆ. ಕಾಡುಗೊಲ್ಲ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಕೆಲವರಲ್ಲಿ ಮುಂಚೂಣಿಯಲ್ಲಿರುತ್ತಾರೆ. ಶಿವುಯಾದವ್ರವರಿಗೆ ೨೦೧೩ರಲ್ಲಿ ೨೦೧೮ರಲ್ಲಿ ಹಾಗೂ ೨೦೨೩ರಲ್ಲೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿ-ಫಾರಂ ವಂಚಿತರಾಗಿರುತ್ತಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಉಸ್ತುವಾರಿ ಮುಖಂಡರು ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ನೀಡುವ ಭರವಸೆ ನೀಡಿರುತ್ತಾರೆ. ಆದರೂ ಸಹ ಯಾವುದೇ ಭರವಸೆ ಈಡೇರಿಸಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದು ತಮ್ಮ ಸರ್ಕಾರದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶಿವು ಯಾದವ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಗೆ ಪೂರಕವಾಗಲು ಸಹಕಾರ ಮಾಡಬೇಕೆಂದು ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.