i
ಜಿಪಂ, ತಾಪಂ ರಾಜಕೀಯ ಮೀಸಲಾತಿಗೆ ಸಮಯ ಕೇಳಿದ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಎಲ್ಲ ಜಿಪಂ ಹಾಗೂ ತಾಪಂ ಕ್ಷೇತ್ರಗಳಿಗೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ವಿಚಾರವಾಗಿ ನ್ಯಾಯಾಲಯದ ನಿರ್ದೇಶನ ಪಾಲಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದೆ.
ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಂಡು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ನ್ಯಾಯಾಲಯದ ಆದೇಶ ಪಾಲಿಸಲು ಆರು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪದ ಪೀಠವು ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿ ಆದೇಶ ಮಾಡಿತು.