i
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಯಾಗಿ ಎನ್.ಜಯರಾಂ ನೇಮಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ(ಆಯುಕ್ತ)ಯಾಗಿ ಐಎಎಸ್ ಅಧಿಕಾರಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ನೂತನ ಕಾರ್ಯದರ್ಶಿಯಾಗಿ ಸರ್ಕಾರದಿಂದ ನೇಮಕವಾಗಿರುವ 2004ರ ಬ್ಯಾಚ್ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಂ ಅವರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ 2020ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ತಿಂಗಳು ಕಾಲ ಕಂದಾಯ ಇಲಾಖೆಯಲ್ಲೂ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಿದ್ದರು. ಈಗ ವಾರ್ತಾ ಮತ್ತು ಪ್ರಸಾರ ಇಲಾಖೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲು ನೇಮಕವಾಗಿದ್ದಾರೆ.
ಈ ಹಿಂದೆ ಐಪಿಎಸ್ ಅಧಿಕಾರಿ ಹರ್ಷ ಅವರು ವಾರ್ತಾ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದು, ಅಧ್ಯಯನ ರಜೆ ತೆಗೆದುಕೊಂಡ ಕಾರಣ ಆ ಹುದ್ದೆಗೆ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನಿಯೋಜಿಸಲಾಗಿತ್ತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಡಿಐಪಿಆರ್ ಇಲಾಖೆಗೆ ನಿಯೋಜನೆಗೊಂಡಿದ್ದ ವಿನೋತ್ ಪ್ರಿಯಾ ಅವರು ಚುನಾವಣಾ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು ಎನ್ನುವುದನ್ನು ಸ್ಮರಿಸಬಹುದಾಗಿದೆ.