i
ಪದವಿ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಮಾರ್ಗಸೂಚಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಜಾರಿ ಮಾಡಿದ್ದು ಈ ಪೈಕಿ ಯುವ ನಿಧಿ ಯೋಜನೆ ಅಡಿ ನಿರುದ್ಯೋಗಿ ಪದವೀಧರರಿಗೆ ಮತ್ತು ಡಿಪ್ಲೋಮಾ ಪಾಸ್ ಆದವರಿಗೆ ಭತ್ಯೆ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಯುವನಿಧಿ ಯೋಜನೆ ಕುರಿತು ಮಾರ್ಗಸೂಚಿ ಹೊರಡಿಸಿದ್ದಾರೆ.
ಮಾರ್ಗಸೂಚಿಯಂತೆ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ಹಾಗೂ ಡಿಪ್ಲೋಮಾ ಪಾಸ್ ಆದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂ,ರಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆ ಜಾರಿಗೊಳಿಸಿ ಮಾರ್ಗಸೂಚಿ ಹೊರಡಿಸಲಾಗಿದೆ.
2023ರ ವರ್ಷದಲ್ಲಿ ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂ. ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು1500 ರೂ.ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪದವಿ, ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆ ಲಾಭ ದೊರೆಯಲಿದೆ.
ನಿರುದ್ಯೋಗಿ ಭತ್ಯೆಯನ್ನು ಡಿಬಿಟಿ ಮೂಲಕ ನೀಡಲು ಉದ್ದೇಶಿಸಲಾಗಿದ್ದು, ಫಾಲಾಭುವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.