i
ಜುಲೈ 28ರವರೆಗೆ ಭಾರೀ ಮಳೆ, ಕಾವೇರಿ-ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷ್ಣಾ ಜಲಾನಯನ ಮಳೆಯ ಮುನ್ಸೂಚನೆ:
ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕೃಷ್ಣಾ ಮತ್ತು ಗೋದಾವರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಅತಿ ಭಾರಿ ಮಳೆ ಬೀಳಲಿದ್ದು ಜುಲೈ-28 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು-28ರ ನಂತರ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಕೃಷ್ಣಾ ಮತ್ತು ಗೋದಾವರಿ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಮುಂದಿನ ಒಂದು ವಾರದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಳ್ಳಬಹುದಾಗಿದ್ದು ಸಾರ್ವಜನಿಕರು ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ಕಾವೇರಿ ಜಲಾನಯನ ಪ್ರದೇಶದ ಮಳೆಯ ಮುನ್ಸೂಚನೆ:
ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಜುಲೈ 26 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ. ನಂತರ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಬುಹುತೇಕ ಜಿಲ್ಲೆಗಳಲ್ಲಿ ಸಾಕಾಷ್ಟು ಮಳೆಯಾಗಲಿದ್ದು, ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿದೆ.
ಪ್ರಮುಖವಾಗಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಜುಲೈ 26 ರಿಂದ ಜುಲೈ 28ರ ಅವಧಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ತಲೆದೊರುವ ಸಾಧ್ಯತೆಗಳು ಇರುವುದರಿಂದ ಜಿಲ್ಲಾಡಳಿತಗಳು ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆಯಿದೆ. ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಪರಿಸ್ಥಿತಿಯಿಂದಾಗಿ ರಾಜ್ಯದ ಅಣೆಕಟ್ಟು/ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.