i
ದೇವರಾಜ ಅರಸು ಜಯಂತಿ ಅರ್ಥಪೂರ್ಣವಾಗಿರಲಿ–ಅಪರ ಜಿಲ್ಲಾಧಿಕಾರಿ ಕೆ.ಟಿ.ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಡಿನ ಕಣ್ಮಣಿ ಎನಿಸಿದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿರಲಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳಾಗಿ ದೇವರಾಜ ಅರಸು ಅವರು ಹಲವು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿ ನಿಯಲಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಿ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಇಂಬು ನೀಡಿದರು. ಕಾಂತ್ರಿಕಾರ ಭೂ ಸುಧಾರಣೆ ಕಾಯ್ದೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವಲ್ಲಿ ದೇವರಾಜ ಅರಸು ಅವರ ಪಾತ್ರ ದೊಡ್ಡದು. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಮುನ್ನುಡಿ ಬರೆದರು. ಇದೇ ಆಗಸ್ಟ್ 20ನೇ ತಾರೀಖಿನಂದು ದೇವರಾಜು ಅರಸು ಅವರ 108ನೇ ಜನ್ಮದಿನವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಗುವುದು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಪ್ಪದೇ ಜಯಂತಿಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿನಿಲಯಗಳಲ್ಲಿ ಆಯಾ ನಿಲಯಪಾಲಕರ ನೇತೃತ್ವದಲ್ಲಿ ದೇವರಾಜು ಅರಸು ಜಯಂತಿ ಆಚರಿಸಿ, ಅವರ ಬಗೆಗಿನ ಪುಸ್ತಕಗಳನ್ನು ಓದಲು ಮಕ್ಕಳಿಗೆ ನೀಡಿ ಎಂದರು.
ಜಯಂತಿ ಆಚರಣೆಗೆ ಎಲ್ಲಾ ಇಲಾಖೆಗಳು ಸಹಾಕಾರ ನೀಡಬೇಕು. ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ತರಾಸು ರಂಗಮಂದಿರದವರೆಗೂ ಜಾನಪದ ಕಲಾತಂಡಗಳೊಂದಿಗೆ ದೇವರಾಜ ಅರಸು ಭಾವಚಿತ್ರ ಮೆರಣಿಗೆ ಮಾಡಲಾಗುವುದು. ರಂಗಮಂದಿರಲ್ಲಿ ವೇದಿಕೆಯನ್ನು ಹೂ ಕುಂಡ ಹಾಗೂ ಹೂಗಳಿಂದ ತೋಟಗಾರಿಕೆ ಇಲಾಖೆ ವತಿಯಿಂದ ಅಲಂಕರಿಸಬೇಕು. ನಗರಸಭೆ ವತಿಯಿಂದ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಸಂದರ್ಭದಲ್ಲಿ ಅಗತ್ಯ ಬಂದೋಬಸ್ತ್ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ವೇದಿಕೆ ಕಾರ್ಯಕ್ರಮದಲ್ಲಿ ದೇವರಾಜು ಅರಸು ಅವರ ಜೀವನ ಮತ್ತು ಸಾಧನೆಗಳ ಕುರಿತು ಉಪನ್ಯಾಸ ಏರ್ಪಡಿಸಬೇಕು. ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿನಿಲಯಗಳಲ್ಲಿದ್ದು, ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವಂತೆ ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರಾನಾಯಕ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹನುಮನಾಯಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಬಾಬುರತ್ನ, ಕನ್ನಡ ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.