i
ಎತ್ತಿನಹೊಳೆ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂ ಗ್ರಾಮಾಂತರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹರಿಸಲಾಗುತ್ತದೆ-ಡಿಸಿಎಂ ಶಿವಕುಮಾರ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಲಸಂಪನ್ಮೂಲ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ತಂಡ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎತ್ತಿನಹೊಳೆ ಯೋಜನೆ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದೆ. ಕುಡಿಯುವ ನೀರಿನ ಯೋಜನೆ ತ್ವರಿತಗತಿಯಲ್ಲಿ ಮುಂದುವರೆಯಬೇಕು. ಕಾಮಗಾರಿ ಶರವೇಗದಲ್ಲಿ ಮುಂದುವರೆಸುವಂತೆ ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸೂಚನೆ ನೀಡಿದರು.ಮುಂದಿನ 100 ದಿನದಲ್ಲಿ 42 ಕಿ.ಮೀ.ವರೆಗಿನ ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ನೀರು ಹರಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ಎತ್ತಿನಹೊಳೆ ಯೋಜನೆ ಯಶಸ್ಸಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದೆ. ಎತ್ತಿನಹೊಳೆ ಯೋಜನೆಯ ಕುರಿತು ಹಾಸನದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ, ಈ ಯೋಜನೆ ಕಾಮಗಾರಿಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದರು. ಪಶ್ಚಿಮಘಟ್ಟದಿಂದ ಕೋಲಾರದವರೆಗೆ ನೀರನ್ನು ಹರಿಸುವ ಯೋಜನೆಯನ್ನು ತಯಾರು ಮಾಡಿದ್ದೇವೆ. ಸುಮಾರು 24 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದ್ದು, ಈಗಾಗಲೇ 14 ಸಾವಿರ ಕೋಟಿ ರೂಪಾಯಿ ಯೋಜನೆಗಾಗಿ ಖರ್ಚು ಮಾಡಲಾಗಿದೆ. ಈ ಯೋಜನೆಯ ಕಾಮಗಾರಿಯ ಪ್ರಗತಿ ಪರಿಶೀಲನೆ ವೇಳೆ ಕೆಲವು ವಿಷಯಗಳು ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಮ್ಮದೇ ಕಾನೂನುಗಳನ್ನು ರೂಪಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ. ತಕ್ಷಣವೇ ಈ ಕುರಿತು ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.
ಅರಣ್ಯ ವ್ಯಾಪ್ತಿಯಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಅರಣ್ಯ ಇಲಾಖೆಯವರು ಕಾಮಗಾರಿಗೆ ಸಹಕರಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು.ವಿಶ್ವೇಶ್ವರಯ್ಯ ಜಲ ನಿಗಮ ವತಿಯಿಂದ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಕುಡಿಯುವ ನೀರಿನ ಯೋಜನೆ ವಿಳಂಬ ಆಗದಂತೆ ಕಾಮಗಾರಿ ಚುರುಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.