i
1500 ಎಕರೆಗೂ ಹೆಚ್ಚು ಅರಣ್ಯ ಭೂಮಿ ಕಬಳಿಕೆ ಸಮಗ್ರ ತನಿಖೆ ಮಾಡಿ-ಜಯಚಂದ್ರ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಶಿರಾ ಕ್ಷೇತ್ರ ವ್ಯಾಪ್ತಿಯಲ್ಲಿ 1500 ಎಕರೆಗೂ ಹೆಚ್ಚು ಅರಣ್ಯ ಭೂಮಿ ಕಬಳಿಕೆ ಆಗಿದ್ದು ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಶಿರಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಆಗ್ರಹ ಮಾಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ನೂರಾರು ಬೋಗಸ್ ಹಕ್ಕುಪತ್ರ ವಿತರಣೆಯಾಗಿದ್ದು, ೧೫೦೦ ಎಕರೆಗೂ ಹೆಚ್ಚು ಅರಣ್ಯ ಭೂಮಿ ಭೂಕಬಳಿಕೆದಾರರ ಪಾಲಾಗಿದ್ದು, ಈ ಕುರಿತಂತೆ ತನಿಖೆ ನಡೆಸುವಂತೆ ಕಂದಾಯ ಸಚಿವರಲ್ಲಿ ಮನವಿ ಮಾಡಿದಾಗ ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮಧುಗಿರಿ ಉಪವಿಭಾಗಾಧಿಕಾರಿಗಳು ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಇನ್ನೊಂದು ತಿಂಗಳೊಳಗಾಗಿ ತನಿಖೆಯನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಸರ್ಕಾರಿ ಜಮೀನುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು ಎಂದು ಅವರು ಈ ಸಂದರ್ಭ ಸೂಚಿಸಿದರು.
ಪ್ರತಿ ತಿಂಗಳು ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ತಪ್ಪದೇ ಪರಿಶೀಲಿಸುವುದಾಗಿ ಹಾಗೂ ೨-೩ ತಿಂಗಳಿಗೊಮ್ಮೆ ಭೌತಿಕ ಸಭೆ ನಡೆಸುವುದಾಗಿ ತಿಳಿಸಿದ ಸಚಿವರು, ಗ್ರಾಮಪಂಚಾಯತಿ, ನಾಡಕಚೇರಿ, ತಾಲ್ಲೂಕು ಪಂಚಾಯತಿ, ಉಪನೋಂದಣಾಧಿಕಾರಿ ಕಚೇರಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಶಾಸಕರುಗಳಾದ ಸುರೇಶ್ ಗೌಡ, ಸುರೇಶ್ ಬಾಬು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ರಶ್ನಿ ವಿ.ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿ.ಪಂ. ಸಿಇಓ ಜಿ.ಪ್ರಭು, ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರುಗಳು, ಗ್ರಾಮಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.