i
ಜೆಡಿಎಸ್ ಪಕ್ಷಕ್ಕೆ ನೂತನ ಸಾರಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ನೇಮಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಿ, ಪಕ್ಷದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಅಡಹಾಕ್ ಅಧ್ಯಕ್ಷರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ರಾಜ್ಯದ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಕುಮಾರಸ್ವಾಮಿ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಅಲ್ಲದೆ ಈ ಒಮ್ಮತದ ನಿರ್ಧಾರಕ್ಕೆ ಕಾರಣರಾದ ಪಕ್ಷದ ಎಲ್ಲಾ ಮುಖಂಡರು, ಕೋರ್ ಕಮಿಟಿಯ ಎಲ್ಲಾ ಪ್ರಮುಖರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿ ಪ್ರತಿಯೊಬ್ಬರಿಗೂ ಕುಮಾರಸ್ವಾಮಿ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.ಪಕ್ಷಕ್ಕೆ ನವಚೈತನ್ಯ ತುಂಬುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ವಿಜಯದಶಮಿ ನಂತರ ಸಂಘಟನೆಯನ್ನು ಆರಂಭಿಸೋಣ. ಎಲ್ಲರ ಸಹಕಾರ ಇರಲಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.