
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು ಈ ಕುರಿತು ಲೋಕಾಯುಕ್ತಕ್ಕೆ ವಕೀಲರೊಬ್ಬರು ದೂರು ನೀಡಿದ್ದಾರೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ 600 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ, ಅಲ್ಲದೆ ಕಪ್ಪು ಪಟ್ಟಿಯಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಂ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಎನ್ನುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ವಕೀಲರು ಇಷ್ಟಕ್ಕೆ ಸುಮ್ಮನಾಗದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ಗುತ್ತಿಗೆದಾರರಿಂದ ಅಂಗನವಾಡಿಗೆ ಪೂರೈಕೆಯಾಗುವ ಆಹಾರದಲ್ಲಿ ಗುಣಮಟ್ಟ ಇರುವುದಿಲ್ಲ, ಆದ್ದರಿಂದ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು, ಆದರೆ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. 600 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ದೂರಿನಲ್ಲಿ ವಕೀಲರು ಉಲ್ಲೇಖಿಸಿದ್ದಾರೆ.