i
ಶಾಲಾ ಮಕ್ಕಳ ರಕ್ಷಿಸಿ, ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಮಾರಕ-ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣೆ ಲಾಭಕ್ಕಾಗಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕದ ಮಾದರಿ!! ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.ಶಕ್ತಿ ಯೋಜನೆಯ ಪರಿಣಾಮ ನಿತ್ಯವೂ ಶಾಲೆಗೆ ಹೋಗಬೇಕಾಗಿರುವ ಮಕ್ಕಳಿಗೆ ಬಸ್ಸುಗಳಲ್ಲಿ ಪ್ರಯಾಣಕ್ಕೆ ಸ್ಥಳಾವಕಾಶ ಸಿಗುತ್ತಿಲ್ಲ. ಶಿಕ್ಷಕರು, ಕಾರ್ಮಿಕರಿಗೂ ಇದೇ ದುಸ್ಥಿತಿ. ಆಟೋ, ಲಗೇಜ್ ಆಟೋ, ಗೂಡ್ಸ್ ವಾಹನಗಳನ್ನು ಹತ್ತಿ ಅಪಾಯಕಾರಿ ರಸ್ತೆಗಳಲ್ಲಿ ಮಕ್ಕಳು ಶಾಲೆಗೆ ಹೋಗಬೇಕು, ಮನೆಗೆ ವಾಪಸ್ಸು ಬರಬೇಕು. ಒಂದೆಡೆ ಬಸ್ಸುಗಳ ಕೊರತೆ, ಇನ್ನೊಂದೆಡೆ ಮಹಿಳೆಯರು ಪ್ರವಾಸಿ ತಾಣಗಳಿಗೆ ಮುಗಿಬಿದ್ದ ಪರಿಣಾಮ ಮಕ್ಕಳು ರಾತ್ರಿಯಾದರೂ ಮನೆ ತಲುಪುತ್ತಿಲ್ಲದಿರುವುದು ಆಘಾತಕಾರಿ.
ಗ್ರಾಮೀಣ ಪ್ರದೇಶದಲ್ಲಿ ಈ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸಿ, ಮಕ್ಕಳ ಪಾಡು ಕೇಳುವವರಿಲ್ಲವಾಗಿದೆ. ಪರೀಕ್ಷೆ ಸಮಯದಲ್ಲಿ ಅವರ ಸಂಕಷ್ಟ ಹೇಳತೀರದು ಎಂದು ಅವರು ಆತಂಕ ವ್ಯಕ್ತ ಪಡಿಸಿದ್ದಾರೆ.ಶಕ್ತಿ ಯೋಜನೆ ಬಗ್ಗೆ ನನ್ನ ತಕರಾರು ಇಲ್ಲ. ಆದರೆ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಬೇಕು ಎನ್ನುವ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ತುರ್ತುಕ್ರಮ ವಹಿಸಿ, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ ಆಗ್ರಹ ಮಾಡಿದ್ದಾರೆ.