i
ಗ್ರಾಮೀಣ ಭಾಗದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ.ಜಾತಿ, ಪ.ಪಂಗಡ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ ಸೇರಿದಂತೆ ಯಾವುದೇ ಹಾಸ್ಟೆಲ್ಗಳಿಗೆ ಗ್ರಾಮೀಣ ಭಾಗಗಳಿಂದ ಎಷ್ಟೇ ವಿದ್ಯಾರ್ಥಿಗಳು ಬಂದರೂ ಅಂತಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ದಾಖಲಿಗೆ ನಿರಾಕರಿಸಬಾರದು ಎಂದು ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಸೂಚನೆ ನೀಡಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಕರೆಯಲಾಗಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಅಗತ್ಯಬಿದ್ದರೆ, ಹೆಚ್ಚುವರಿ ಸ್ಥಾನಗಳನ್ನು ಸರ್ಕಾರದಿಂದ ಮಂಜೂರಾತಿ ಪಡೆಯಬಹುದು. ಒಟ್ಟಾರೆ ಹಾಸ್ಟೆಲ್ ಪ್ರವೇಶ ಕೋರಿ ಬರುವ ಹಳ್ಳಿಯ ಮಕ್ಕಳಿಗೆ ಹಾಸ್ಟೆಲ್ನಲ್ಲಿ ಪ್ರವೇಶ ದೊರೆಯಬೇಕು ಎಂದು ಸೂಚನೆ ನೀಡಿದರು.
ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಮಾತನಾಡಿ, ವಿವಿಧ ಅಭಿವೃದ್ಧಿ ನಿಗಮಗಳಡಿ ಗಂಗಾ ಕಲ್ಯಾಣ, ನೇರ ಸಾಲ ಮತ್ತಿತರ ಯೋಜನೆಗಳಿಗೆ ಆನ್ಲೈನ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಆದರೆ ನಿಗದಿತ ಗುರಿ ಸಂಖ್ಯೆ ಮಾತ್ರ ಕೇವಲ ಬೆರಳಣಿಕೆಯಷ್ಟು ಇದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಸರ್ಕಾರದ ಸವಲತ್ತು ದೊರೆಯುವಂತಾಗಬೇಕು. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ತಿಮ್ಮಯ್ಯ, ಕೆ.ಸಿ.ನಾಗರಾಜು, ಖಲೀಮುಲ್ಲಾ, ರಂಗಸ್ವಾಮಿ, ದೀಪಿಕಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.