i
ರಾಜ್ಯದಲ್ಲಿಮೋದಿಪರ ಅಲೆ ವಿಜಯೇಂದ್ರ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಇಡೀ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪರವಾದ ಅಲೆ ಇದೆ. ಹಾಗಾಗಿ ಕಾಂಗ್ರೆಸ್ನವರು ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು ಇಂದು ಶಿವಮೊಗ್ಗಕ್ಕೆ ಆಗಮಿಸಿ ಪ್ರಚಾರ ನಡೆಸಲಿದ್ದಾರೆ. ಯಾವುದೋ ಭ್ರಮೆಯಲ್ಲಿದ್ದ ಕಾಂಗ್ರೆಸ್ನವರಿಗೆ ಮೋದಿ ಅಲೆ ಇರುವುದು ಈಗ ಅರಿವಾಗಿದೆ. ಹಾಗಾಗಿ ಅಭ್ಯರ್ಥಿಗಳ ಆಯ್ಕೆಗೆ ಚಿಂತಿಸುತ್ತಿದ್ದಾರೆ. ನಾವು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಿದ್ದೇವೆ ಎಂದರು.
ಪುತ್ರನಿಗೆ ಟಿಕೆಟ್ ಸಿಗದ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಮುನಿಸಿನ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲವೂ ಸರಿಯಾಗುತ್ತದೆ. ಎಲ್ಲವನ್ನೂ ಸರಿಪಡಿಸುವ ಕೆಲಸವನ್ನು ಪಕ್ಷದ ವರಿಷ್ಠರು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಬಳಿಕ ಬಿಎಸ್ವೈ ಕುರಿತು ಈಶ್ವರಪ್ಪ ಹೇಳಿಕೆಗೆ, ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಇಂದು ರಾಜ್ಯದಲ್ಲಿ ಪಕ್ಷ ಸದೃಢವಾಗಿ ಬೆಳೆದು ನಿಂತಿದೆ ಎಂದರೆ ಅದರ ಹಿಂದೆ ಲಕ್ಷಾಂತರ ಕಾರ್ಯಕರ್ತರ ಶ್ರಮ, ಹಿರಿಯ ನಾಯಕರ ಅವಿರತ ಹೋರಾಟವಿದೆ. ಅಷ್ಟೇ ಅಲ್ಲದೇ, ಯಡಿಯೂರಪ್ಪನವರು ಸೈಕಲ್ನಲ್ಲೇ ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ ಫಲವಾಗಿ ಬಿಜೆಪಿ ಬಲಿಷ್ಠವಾಗಿದೆ ಎಂದು ಹೇಳಿದರು.