i
ಮತದಾನ ಹೆಚ್ಚಳಕ್ಕೆ ಜಾಗೃತಿ: ನಗರ ಪ್ರದೇಶದಲ್ಲಿ ಜಾಥಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ ವಾಕಥಾನ್ ಮೂಲಕ ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚಿತ್ರದುರ್ಗ ನಗರದ ನಗರಸಭಾ ವ್ಯಾಪ್ತಿಯ ಕಡಿಮೆ ಮತದಾನವಾಗಿರುವ ನಗರದ ದೊಡ್ಡಪೇಟೆ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ ಮತಗಟ್ಟೆ ಪ್ರದೇಶಗಳಲ್ಲಿ ವಾಕಥಾನ್ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್, ಚಿತ್ರದುರ್ಗ ನಗರದ ನಗರಸಭಾ ವ್ಯಾಪ್ತಿಯ ಕಡಿಮೆ ಮತದಾನ ಪ್ರಮಾಣ ದಾಖಲಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಜಾಗೃತಿಗಾಗಿ ವಾಕ್ಥಾನ್, ಮ್ಯಾರಥಾನ್ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮನೆ ಮನೆಗೆ ತೆರಳಿ ಮತದಾನದ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ವಾಕ್ಥಾನ್ ಜಾಥಾ ಕಾರ್ಯಕ್ರಮದಲ್ಲಿ ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ, ಮತದಾನ ಮಾಡುವುದು ಪ್ರತಿಯೊಬ್ಬ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಬಲಗೊಳಿಸಿ, ಮತ ಚಲಾಯಿಸಿ ಪ್ರಜಾಪ್ರಭುತ್ವ ಉಳಿಸಿ, ಓದು ವ್ಯಕ್ತಿತ್ವವನ್ನು ರೂಪಿಸುತ್ತದೆ. ಮತದಾನ ದೇಶವನ್ನು ರೂಪಿಸುತ್ತದೆ. ನೇತ್ರದಾನ ಮಹಾದಾನ, ಮತದಾನ ಶ್ರೇಷ್ಟದಾನ ಎಂಬಿತ್ಯಾದಿ ಜಾಗೃತಿ ಫಲಕಗಳು ಗಮನ ಸೆಳೆದವು.
ಚಿತ್ರದುರ್ಗ ನಗರದ ಐತಿಹಾಸಿಕ ಕೋಟೆ ಮುಂಭಾಗದ ಪ್ರಾರಂಭವಾದ ವಾಕಥಾನ್, ಪಿಲ್ಟರ್ ಹೌಸ್, ಸಂಪಿಗೆ ಸಿದ್ದೇಶ್ವರ ಶಾಲೆ, ದೊಡ್ಡಪೇಟೆ, ರಂಗಯ್ಯನಬಾಗಿಲು, ಉಜ್ಜಿನಿ ಮಠದ ರಸ್ತೆ, ಕರುವಿನಕಟ್ಟೆ ವೃತ್ತ, ಜೋಗಿಮಟ್ಟಿ ರಸ್ತೆ, ಜಂಟಿ ನಿರ್ದೇಶಕರ ಕೈಗಾರಿಕಾ ಇಲಾಖೆ ಕಚೇರಿ, ಪಟ್ಟದ ಪರಮೇಶ್ವರ ಶಾಲೆಯ ಮೂಲಕ ಜಿಲ್ಲಾ ಕ್ರೀಡಾಂಗಣದವರೆಗೂ ಜಾಥಾ ನಡೆಯಿತು.
ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ನಗರಸಭೆ ಪೌರಾಯಕ್ತೆ ಎಂ.ರೇಣಕಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.