i
ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಳೆದ ವಾರ ಮುಕ್ತಾಯಗೊಂಡ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಏಪ್ರಿಲ್ 15 ರಿಂದ ನಗರದ ವಿವಿಧ ಪ್ರೌಢಶಾಲೆಗಳಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಜರುಗುವ ಪ್ರೌಢಶಾಲೆಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.
ನಗರದ ವಾಸವಿ ಪ್ರೌಢಶಾಲೆಯಲ್ಲಿ ಕನ್ನಡ, ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಇಂಗ್ಲಿಷ್, ಸಂತ ಜೋಸೆಫ್ ಬಾಲಕಿಯರ ಪ್ರೌಢ ಶಾಲೆಯಲ್ಲಿ ಹಿಂದಿ, ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಗಣಿತ, ವಿದ್ಯಾ ವಿಕಾಸ ಪ್ರೌಢಶಾಲೆಯಲ್ಲಿ ವಿಜ್ಞಾನ ಹಾಗೂ ಡಾನ್ ಬಾಸ್ಕೋ ಪ್ರೌಢ ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.
ಈ ಶಾಲೆಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 15ರಿಂದ ಮೌಲ್ಯಮಾಪನ ನಿಷೇಧಾಜ್ಞೆ ಮುಗಿಯುವವರೆಗೂ ಜಾರಿಯಲ್ಲಿರುತ್ತದೆ.