i
ಕುಡಿಯುವ ನೀರು ಸಮಸ್ಯೆ ಬಗೆ ಹರಿಸಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ-ಡೀಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ದಿನೇ ದಿನೇ ಬಿಸಿಲ ಧಗೆ ಹೆಚ್ಚಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಬರಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ನಿರ್ವಹಣೆಯ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ತಾಲ್ಲೂಕು ಮಟ್ಟ ಹಾಗೂ ಹೋಬಳಿ ಹಂತದವರೆಗೂ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯೊಂದಿಗೆ ಸಂಬಂಧಪಟ್ಟ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿರುವ ಗ್ರಾಮಗಳ ನಿಖರವಾದ ವರದಿಯನ್ನು ಸಲ್ಲಿಸಬೇಕು ಎಂದು ತಾಕೀತು ಮಾಡಿದರು.
ಚಿತ್ರದುರ್ಗ ತಾಲ್ಲೂಕು ನೋಡಲ್ ಅಧಿಕಾರಿ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಹೋಬಳಿ ಮಟ್ಟದ ನೋಡಲ್ ಅಧಿಕಾರಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದ್ದು, ಚಿತ್ರದುರ್ಗ ತಾಲ್ಲೂಕಿನ ಚನ್ನಯ್ಯನಹಟ್ಟಿ, ಬಹದ್ಧೂರ್ ಘಟ್ಟ, ಬಸವನಶಿವನಕೆರೆ, ಲಿಂಗವ್ವನಾಗ್ತಿಹಳ್ಳಿ, ನೆಲ್ಲಿಕಟ್ಟೆ, ಪೇಲೂರಹಟ್ಟಿ, ಮಾಡನಾಯಕನಹಳ್ಳಿ, ಚಿಕ್ಕಪ್ಪನಹಳ್ಳಿ, ಮುದ್ದಾಪುರ, ಸಿದ್ದವ್ವನದುರ್ಗ, ಹಳೇ ಕಲ್ಲಹಳ್ಳಿ, ಗೋನೂರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಈ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಚಳ್ಳಕೆರೆ ತಾಲ್ಲೂಕಿನಲ್ಲಿ 15 ಗ್ರಾಮಗಳು, ಹಿರಿಯೂರು 53 ಹಳ್ಳಿಗಳು, ಹೊಳಲ್ಕೆರೆ 32 ಹಳ್ಳಿಗಳು, ಹೊಸುದರ್ಗ 15 ಗ್ರಾಮಗಳಲ್ಲಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಸದ್ಯದ ಮಟ್ಟಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಇನ್ನೂ ಒಂದು ವಾರದಲ್ಲಿ ತುಮಕೂರ್ಲಹಳ್ಳಿ, ದೇವಸಮುದ್ರ, ಬಿ.ಜಿ.ಕೆರೆ ವ್ಯಾಪ್ತಿಯ ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ತಾಲ್ಲೂಕುವಾರು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಮಾಹಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಕುಡಿಯುವ ನೀರು ಕುಡಿಯಲು ಯೋಗ್ಯವಾಗಿದೆಯೇ ಎಂಬುವುದರ ಕುರಿತು ಪರೀಕ್ಷೆ ನಡೆಸಿ ನಂತರ ನೀರು ಸರಬರಾಜು ಮಾಡಬೇಕು. ಇದರ ಜೊತೆಗೆ ಬೋರ್ವೆಲ್ ನೀರು ಹಾಗೂ ಆರ್.ಓ. ಘಟಕದ ನೀರನ್ನು ನಿಯಮಿತವಾಗಿ ಪರೀಕ್ಷೆ ನಡೆಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಎಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ, ಈ ಸಮಸ್ಯೆಯಾತ್ಮಕ ಗ್ರಾಮಗಳಿಗೆ ಕೈಗೊಂಡಿರುವ ಕ್ರಮಗಳು, ಟ್ಯಾಂಕರ್ ಪೂರೈಕೆ ಮಾಡುವ ಗ್ರಾಮಗಳಲ್ಲಿ ಇರುವ ಜನಸಂಖ್ಯೆ, ಗ್ರಾಮದಲ್ಲಿರುವ ಇರುವ ಬೋರ್ವೆಲ್ಗಳ ಮಾಹಿತಿ ಸೇರಿದಂತೆ ಇನ್ನೂ ವಾರ ಹಾಗೂ ಹದಿನೈದು ದಿನಗಳಲ್ಲಿ ಸಮಸ್ಯೆಯಾಗುವ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ ಶೀಘ್ರ ವರದಿ ನೀಡುವಂತೆ ತಿಳಿಸಿದ ಅವರು, ಬರ ಹಿನ್ನಲೆಯಲ್ಲಿ ಜನರಿಗೆ ಕುಡಿಯುವ ನೀರು ಕೊಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ತೆರೆಯಲಾಗಿರುವ ಗೋಶಾಲೆಗಳಲ್ಲಿ ಎಷ್ಟು ಜಾನುವಾರುಗಳಿವೆ. ಗೋಶಾಲೆಗಳಲ್ಲಿ ಪ್ರತಿನಿತ್ಯವೂ ಖರ್ಚಾಗುವ ಮೇವು ಮಾಹಿತಿ ನಿಖರವಾಗಿರಬೇಕು. ಗೋಶಾಲೆಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಮೇವು ಇತ್ಯಾದಿಗಳು ಸಮರ್ಪಕವಾಗಿ ವಿತರಣೆಯಾಗುತ್ತಿದೆಯೇ ಎಂಬುವುದರ ಕುರಿತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಗೋಶಾಲೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಸಹಾಯವಾಣಿ ಸಂಖ್ಯೆಗೆ ಸ್ವೀಕೃತವಾದ ದೂರುಗಳ ವರದಿ ನೀಡಿ: ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸಲು ಈ ಹಿಂದೆ ತಾಲ್ಲೂಕು ಕಚೇರಿಗಳಲ್ಲಿ ತಾಲ್ಲೂಕುವಾರು ಸಹಾಯವಾಣಿ ಪ್ರಾರಂಭಿಸಲಾಗಿತ್ತು. ಸಹಾಯವಾಣಿ ಸಂಖ್ಯೆಗೆ ಕಳೆದ ಎರಡು ತಿಂಗಳ ಹಿಂದೆ ತಾಲ್ಲೂಕುವಾರು ಸ್ವೀಕೃತವಾದ ದೂರುಗಳ ಮಾಹಿತಿಯ ವರದಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕಿ ಇಂದಿರಾಬಾಯಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿಲ್ಲೆಯ ಆರು ತಾಲ್ಲೂಕುಗಳ ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.