i
ಬಿಜೆಪಿ ಮಾಜಿ ಶಾಸಕ ಮತ್ತು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಜೆಡಿಎಸ್ ಕುಮಾರಸ್ವಾಮಿ ಭೇಟಿ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಹು-ಧಾ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು ಸಂಚಲನ ಸೃಷ್ಠಿಸಿದೆ.
ಹುಬ್ಬಳ್ಳಿ ಧಾರವಾಡದಲ್ಲಿ ಪಂಚರತ್ನ ರಥ ಯಾತ್ರೆ ಯಶಸ್ವಿಯಾಗಿ ನಡೆದಿದ್ದು ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ,
ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಇಸ್ಮಾಯಿಲ್ ತಮಟಗಾರ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೀಪಕ್ ಚಿಂಚೋರೆ ಈ ಮೂವರು ಪ್ರಮುಖ ಮುಖಂಡರು ಸೇರಿದಂತೆ ಅನೇಕ ನಾಯಕರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿ ರಾಜಕೀಯದಲ್ಲಿ ಬೀರುಗಾಳಿ ಎಬ್ಬಿಸಿದ್ದಾರೆ.
ಪಂಚರತ್ನ ರಥಯಾತ್ರೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದ ಎಚ್.ಡಿ.ಕುಮಾರಸ್ವಾಮಿಯವರನ್ನು ಈ ಸಂದರ್ಭದಲ್ಲಿ ಬಿಜೆಪಿ-ಕಾಂಗ್ರೆಸ್ ಈ ಎರಡೂ ಪಕ್ಷಗಳ ರಾಜಕೀಯ ಮುಖಂಡರು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ಹುಬ್ಬಳ್ಳಿ – ಧಾರವಾಡ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.
ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು ನಾಯಕರ ಈ ನಡೆ ಕುತೂಹಲ ಮೂಡಿಸಿದೆ. ಕುಮಾರಸ್ವಾಮಿ ಆಗಮನದ ಸಮಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಭೇಟಿ ಮಾಡಿ ಮಾತುಕತೆ ನಡೆಸಿದ್ದರೂ ಬಿಜೆಪಿ ಮಾಜಿ ಶಾಸಕರೊಬ್ಬರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಮತ್ತು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿರುವ ಈ ಮುಖಂಡರಿಗೆ ಟಿಕೆಟ್ ತಪ್ಪುವ ಭೀತಿ ಇರುವ ಕಾರಣ ಹೀಗೆ ಮಾಡಿದ್ದಾರೆ ಎನ್ನಲಾಗಿದೆ. ಸ್ವ ಪಕ್ಷದಿಂದ ಟಿಕೆಟ್ ಸಿಗುವ ಆತ್ಮವಿಶ್ವಾಸದಲ್ಲಿ ನಾಯಕರು ಇದ್ದರು. ಆದರೆ ಕೊನೆಗಳಿಗೆಯಲ್ಲಿ ಈ ಮುಖಂಡರಿಗೆ ಟಿಕೆಟ್ ಕೈ ತಪ್ಪಿದರೆ ಜೆಡಿಎಸ್ನಿಂದ ಸ್ಪರ್ಧೆಗಿಳಿಯಲು ಇವರು ತಯಾರಿ ನಡೆಸಿದ್ದಾರೆ. ಒಟ್ಟಿನಲ್ಲಿ ಶತಾಯಗತಾಯ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕು ಎಂಬ ಉತ್ಸಾಹದಲ್ಲಿ ಮುಖಂಡರಿದ್ದಾರೆ. ಟಿಕೆಟ್ ಕೈತಪ್ಪಲಿರುವ ಮುಖಂಡರು ಪಕ್ಷಾಂತರಕ್ಕೆ ಸಜ್ಜಾಗಿದ್ದಾರಾ ಎಂಬ ಪ್ರಶ್ನೆ ಮೂಡಿದ್ದು ಇದು ಪ್ರಮುಖವಾಗಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಸಂದಿಗ್ಧತೆ ತರಲಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.