i
ಮಳೆ ಹಾನಿ ಪ್ರದೇಶಕ್ಕೆ ಡಿಸಿ ಭೇಟಿ, ಪರಿಶೀಲನೆ: ತ್ವರಿತ ಪರಿಹಾರಕ್ಕೆ ಸೂಚನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಚಿತ್ರದುರ್ಗ ನಗರದ ವಿವಿಧ ಪ್ರದೇಶಗಳಿಗೆ ಗುರುವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗ ನಗರದ ಒನಕೆ ಓಬವ್ವ ಕ್ರೀಡಾಂಗಣದ ರಸ್ತೆ, ಸಾಧಿಕ್ ನಗರ, ಬುದ್ಧ ನಗರ, ಬಾಬು ಜಗಜೀವನರಾಮ್ ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರಳಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಈ ಪ್ರದೇಶಗಳಿಗೆ ಅರಣ್ಯ ಇಲಾಖೆ, ನಗರಸಭೆ, ಕಂದಾಯ ಇಲಾಖೆ, ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ, ಮಾಹಿತಿ ಪಡೆದು, ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ತ್ವರಿತವಾಗಿ ತೆರವುಗೊಳಿಸಬೇಕು. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಹಾನಿ ಅನುಭವಿಸಿದ ಮತ್ತು ಮನೆ ಹಾನಿಯಾದ ಪ್ರಕರಣಗಳಲ್ಲಿ ನಿಯಮಾನುಸಾರ ತ್ವರಿತವಾಗಿ ಪರಿಹಾರ ವಿತರಿಸಬೇಕು ಎಂದು ಸೂಚನೆ ನೀಡಿದರು. ಬೆಸ್ಕಾಂ ಇಲಾಖೆಯ ಬಹುತೇಕ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದು, ಧರೆಗುಳಿದ ಸುಮಾರು 15ಕ್ಕೂ ಹೆಚ್ಚು ವಿದ್ಯುತ್ ಕಂಬಗಳನ್ನು ದುರಸ್ಥಿಗೊಳಿಸುವ ಕಾರ್ಯ ನಡೆಸಿದರು.
ಇನ್ನೂ ಎರಡು-ಮೂರು ದಿನ ಜಿಲ್ಲೆಯ ಎಲ್ಲೆಡೆ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಕಂಬಗಳಿಗೆ ಅಡಚಣೆಯಾಗುವ ಮರ, ರಂಬೆ, ಕೊಂಬೆಗಳನ್ನು ತೆರವುಗೊಳಿಸಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಸೂಚಿಸಿದರು.
ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ದಿನಸಿ ವಸ್ತುಗಳು ಜಲಾವೃತ ಗೊಂಡಿದ್ದವು. ಅಂತಹ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಚರಂಡಿಗಳು, ಕಸಕಡ್ಡಿ ತುಂಬಿದ್ದರಿಂದ ನೀರು ಹೊರಬಂದು ಮನೆಗಳಿಗೆ ನುಗ್ಗಿದೆ. ಇದಕ್ಕೆ ನಗರಸಭೆ ಅಧಿಕಾರಿಗಳು ಹೊಣೆಗಾರರು ಎಂದು ಅಲ್ಲಿನ ನಿವಾಸಿಗಳು ದೂರು ನೀಡಿದ್ದರಿಂದ ಇನ್ನೂ ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ನಾಗವೇಣಿ, ಅರಣ್ಯ ಇಲಾಖೆ, ನಗರಸಭೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.