ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರಿನ ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ಮಧ್ಯರಾತ್ರಿ ಪೊಲೀಸರ ಬಂದೂಕು ಸದ್ದು ಮಾಡಿದೆ. ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ರೌಡಿಶೀಟರ್, ಬಂದ ಬಂಧಿಸಲು ಬಂದ ಪೊಲೀಸರ ಮೇಲೆಯೇ ದಾಳಿ ನಡೆಸಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
ಘಟನೆಯ ವಿವರ: ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಸುಂಡ್ರಪಾಳ್ಯದಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಜಿಶಾನ್, ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.
ಈ ಬಗ್ಗೆ ಸ್ಥಳೀಯರಿಂದ ಖಚಿತ ಮಾಹಿತಿ ಲಭಿಸುತ್ತಿದ್ದಂತೆ, ಬಂಡೆಪಾಳ್ಯ ಪೊಲೀಸ್ ಠಾಣೆಯ ಪಿಎಸ್‌ಐ ಸಚಿನ್ ಹಾಗೂ ಸಿಬ್ಬಂದಿ ಸಂದೀಪ್ ಕಾಂಬ್ಳೆ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಮಧ್ಯರಾತ್ರಿ ಸುಮಾರು 12.50ರ ವೇಳೆಗೆ ಆರೋಪಿ ಜಿಶಾನ್‌ನನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಆತ ತಪ್ಪಿಸಿಕೊಳ್ಳುವ ಭರದಲ್ಲಿ ತನ್ನ ಬಳಿಯಿದ್ದ ಮಾರಕಾಸ್ತ್ರದಿಂದ ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.
ಆತ್ಮರಕ್ಷಣೆಗಾಗಿ ಪಿಎಸ್‌ಐ ಫೈರಿಂಗ್: ಕಾನ್‌ಸ್ಟೇಬಲ್ ಮೇಲೆ ದಾಳಿ ನಡೆಸಿದ ಬಳಿಕ ಆರೋಪಿ ಜಿಶಾನ್, ಪಿಎಸ್‌ಐ ಸಚಿನ್ ಅವರ ಮೇಲೆಯೂ ಮಾರಣಾಂತಿಕ ಹಲ್ಲೆಗೆ ಮುಂದಾಗಿದ್ದಾನೆ. ಈ ಹಂತದಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಆತ್ಮರಕ್ಷಣೆಗಾಗಿ ಪಿಎಸ್‌ಐ ಸಚಿನ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಕುಸಿದುಬಿದ್ದ ಆರೋಪಿಯನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಹಾಗೂ ಗುಂಡೇಟು ತಗುಲಿದ ರೌಡಿಶೀಟರ್ ಜಿಶಾನ್ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲವು ಪ್ರಕರಣಗಳಲ್ಲಿ ಭಾಗಿ: ಆರೋಪಿ ಜಿಶಾನ್ ಈ ಹಿಂದೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಹೇಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಆದಿಲ್ ಅಕ್ಮಲ್‌ನ ಆಪ್ತ ಸಹಚರನಾಗಿದ್ದಾನೆ. ಈತನ ಮೇಲೆ ಹಲವು ಕ್ರಿಮಿನಲ್ ಪ್ರಕರಣಗಳಿದ್ದು, ಪೊಲೀಸರಿಗೆ ದೀರ್ಘಕಾಲದಿಂದ ಬೇಕಾಗಿದ್ದನು. ಮಧ್ಯರಾತ್ರಿ ಈತ ಯಾವ ದೊಡ್ಡ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಎಂಬ ಬಗ್ಗೆ ಬಂಡೆಪಾಳ್ಯ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.




