ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಗ್ರಾಮೀಣ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬೃಹತ್ ಕೊಡುಗೆ ನೀಡಿದ್ದು, ಒಟ್ಟು 16,000 ಕೋಟಿ ವೆಚ್ಚದ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಹಾಗೂ ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ ಸೇರಿದಂತೆ ಹಲವು ಯೋಜನೆಗಳನ್ನು ಸಿಎಂ ಉದ್ಘಾಟಿಸಿದರು.
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 10,000 ಕೋಟಿ ವೆಚ್ಚದಲ್ಲಿ ರಾಜ್ಯದಾದ್ಯಂತ 15,000 ಕಿ.ಮೀ. ಉದ್ದದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು.
ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ: 6,000 ಕೋಟಿ ವೆಚ್ಚದಲ್ಲಿ 29,340 ಗ್ರಾಮಗಳಲ್ಲಿ ಸಿ.ಸಿ ರಸ್ತೆಗಳು, ಚರಂಡಿಗಳು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, "ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ" ಎಂದು ಭರವಸೆ ನೀಡಿದರು.
ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಶಾಸಕ, ಸಚಿವ ಕೆ.ಎಸ್. ಬಸವಂತಪ್ಪ, ರಹೀಂ ಖಾನ್, ಎನ್.ಎಚ್. ಕೋನರಡ್ಡಿ, ಅಶೋಕ್ ಪಟ್ಟಣ್, ವೆಂಕಟಶಿವಾರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ ತರನ್ನಮ್ ಸೇರಿದಂತೆ ಹಲವು ಗಣ್ಯರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.




