ಚಂದ್ರವಳ್ಳಿ ನ್ಯೂಸ್, ತುಮಕೂರು:
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಗ್ರಾಮ ಆಡಳಿತಾಧಿಕಾರಿ ಭುವನಾ(24) ಅವರು ಭೀಕರ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ತುಮಕೂರು ತಾಲೂಕಿನ ಗೂಳೂರು ಬಳಿ ಭುವನಾ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಸಾರ್ವಜನಿಕ ಕೆಲಸ ನಿಮಿತ್ತ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಅವರ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ತುರ್ತು ಚಿಕಿತ್ಸೆ ಫಲಿಸಲಿಲ್ಲ: ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಭುವನಾ ಅವರನ್ನು ತಕ್ಷಣವೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಅತಿ ಸಣ್ಣ ವಯಸ್ಸಿನಲ್ಲೇ ಸಾರ್ವಜನಿಕ ಸೇವೆಯಲ್ಲಿದ್ದ ದಕ್ಷ ಅಧಿಕಾರಿ ಕರ್ತವ್ಯದ ಹಾದಿಯಲ್ಲೇ ಜೀವ ಕಳೆದುಕೊಂಡಿರುವುದು ಕಂದಾಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ತೀವ್ರ ಕರಳು ಹಿಂಡುವ ವಿಷಾದವನ್ನು ಮೂಡಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



