ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ ಅವರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಅರ್ಪಿಸಿದರು.
ಬಳಿಕ ಮಾತನಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮಹಾತ್ಮ ಗಾಂಧೀಜಿ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ, ಶ್ರೇಷ್ಠ ಪತ್ರಕರ್ತರೂ ಆಗಿದ್ದರು. 1903ರಲ್ಲೇ *ಇಂಡಿಯನ್ ಒಪಿನಿಯನ್* ಪತ್ರಿಕೆಯನ್ನು ಆರಂಭಿಸಿದ ಅವರು, ನಂತರ *ಯಂಗ್ ಇಂಡಿಯಾ*, *ನವಜೀವನ್* ಹಾಗೂ *ಹರಿಜನ* ಪತ್ರಿಕೆಗಳನ್ನು ಪ್ರಕಟಿಸಿದರು. ಅವರ ಸಂಪಾದಕೀಯಗಳು ದೇಶದ ಜನರಲ್ಲಿ ಹೊಸ ಚೈತನ್ಯ ಮೂಡಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಬಲ ತುಂಬಿದವು. ಅಹಿಂಸಾತ್ಮಕ ಹೋರಾಟದ ಮೂಲಕ ಬ್ರಿಟಿಷರನ್ನು ದೇಶದಿಂದ ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕ ಗಾಂಧೀಜಿ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ನವರಂಗ್ ಸರ್ಕಲ್‌ನಲ್ಲಿ ಕಳೆದ 45 ವರ್ಷಗಳಿಂದ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ರವೀಂದ್ರನಾಥ ಅವರನ್ನು ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರವೀಂದ್ರನಾಥ, "ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಗಳು ನಾಲ್ಕಾಣೆ, ಎಂಟಾಣೆ ಬೆಲೆಯಲ್ಲಿದ್ದ ಕಾಲದಿಂದಲೂ ಪತ್ರಿಕೆ ವಿತರಣೆ ಮಾಡುತ್ತಿದ್ದೇನೆ. ಸ್ವಾತಂತ್ರ್ಯ ದಿನಾಚರಣೆಯಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಲ್ಪಟ್ಟಿರುವುದು ನನಗೆ ಅಪಾರ ಸಂತೋಷ ತಂದಿದೆ" ಎಂದು ಹೇಳಿದರು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಉಪಾಧ್ಯಕ್ಷ ಎನ್. ಪ್ರಶಾಂತ್ ಕುಮಾರ್ ಮಾತನಾಡಿ, ಪತ್ರಿಕಾ ವಿತರಕರ ಸಂಘಟನೆಗೆ ಹಾಗೂ ವಿವಿಧ ಹಂತಗಳಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೀಡಿರುವ ಬೆಂಬಲ ಅನನ್ಯವಾಗಿದೆ. ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ ಅವರ ಸೇವೆಯೂ ಸ್ಮರಣೀಯವಾಗಿದೆ ಎಂದು ಹೇಳಿದರು.
ಹಿರಿಯ ಪತ್ರಕರ್ತ ರಾಯಚೂರಿನ ಸಿದ್ದು ಬಿರಾದಾರ್ ಮಾತನಾಡಿ, ರಾಜ್ಯದ ಅತಿ ದೊಡ್ಡ ಪತ್ರಕರ್ತರ ಸಂಘಟನೆಯಾದ ಕೆಯುಡಬ್ಲ್ಯೂಜೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.



