ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯ ಗೂಳೂರು ಹೋಬಳಿಯ ಮುಳುಕುಂಟೆ ಗ್ರಾಮದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿದ ಶ್ರೀ ವಿಜಯ ಚೌಡೇಶ್ವರಿ ದೇವಿ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಭಕ್ತಿಪೂರ್ವಕವಾಗಿ ಭಾಗವಹಿಸಿ ದೇವಿಯ ದರ್ಶನ ಪಡೆದರು.
ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, "ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ಭಕ್ತಿಶ್ರದ್ಧೆಯ ಪ್ರತೀಕವಾಗಿ ಜಾತ್ರಾ ಮಹೋತ್ಸವಗಳು ದಾರಿದೀಪವಾಗಿವೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಭಕ್ತಿಯನ್ನು ಬೆಳೆಸುತ್ತವೆ ಎಂಬುದು ನನ್ನ ಅಚಲ ನಂಬಿಕೆ," ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕರುಗಳಾದ ಎಂ.ಟಿ. ಕೃಷ್ಣಪ್ಪ, ಸುರೇಶ್ ಗೌಡ, ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ನಿಂಗಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ನೂರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಅಸಂಖ್ಯಾತ ಭಕ್ತಾದಿಗಳು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆಮಾಡಿದ್ದು, ಭಕ್ತರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿತ್ತು.


