ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾದ ಪದಾಧಿಕಾರಿಗಳ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಕಟಿಸಿದ್ದು, ಕರ್ನಾಟಕದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ.
ಮಧ್ವರಾಜ್ ಅವರನ್ನು ಒಬಿಸಿ ಮೋರ್ಚಾದ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇವರೊಂದಿಗೆ ದೆಹಲಿಯ ಗಜೇಂದ್ರ ಯಾದವ್ ಹಾಗೂ ಛತ್ತೀಸ್ಗಢದ ಲಲಿತ್ ಚಂದ್ರಾಕರ್ ಅವರನ್ನೂ ಇದೇ ಹುದ್ದೆಗೆ ನಿಯೋಜಿಸಲಾಗಿದೆ.
ಈ ನೇಮಕಾತಿ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಸಂತಸ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ರಾಷ್ಟ್ರೀಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿರಿಯ ನಾಯಕ ಪ್ರಮೋದ್ ಮಧ್ವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇವರ ನಾಯಕತ್ವದಲ್ಲಿ ಹಿಂದುಳಿದ ವರ್ಗಗಳ ಸಂಘಟನೆಗೆ ಮತ್ತಷ್ಟು ಬಲ ಬರಲಿದೆ" ಎಂದು ಶುಭ ಹಾರೈಸಿದ್ದಾರೆ.




