ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ದೇಶವಿರೋಧಿ ನಿಲುವು ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ, ಕೋಟೆ ನಗರಿ ಚಿತ್ರದುರ್ಗದಲ್ಲಿ ಬಿಜೆಪಿ ವತಿಯಿಂದ 'ಪ್ರಜಾತಂತ್ರ ಉಳಿಸಿ - ಅರಾಜಕತೆ ಅಳಿಸಿ' ಬೃಹತ್ ಜನಜಾಗೃತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಅವರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತಪಡಿಸಿದರು.
ಜನಾಕ್ರೋಶದ ಸಂಕೇತ: ಪಾದಯಾತ್ರೆಯಲ್ಲಿ ಹರಿದುಬಂದ ಜನಸಾಗರವು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಜನತೆ ತೀವ್ರ ಆಕ್ರೋಶಗೊಂಡಿರುವುದಕ್ಕೂ ಮತ್ತು ದೇಶದಲ್ಲಿ ಸೃಷ್ಟಿಯಾಗುತ್ತಿರುವ ಅರಾಜಕತೆಗೆ ಅಂತ್ಯ ಹಾಡಲು ಜನತೆ ಸಜ್ಜಾಗಿರುವುದಕ್ಕೂ ಸ್ಪಷ್ಟ ದಿಕ್ಸೂಚಿಯಾಗಿದೆ ಎಂದು ನಾಯಕರು ಬಣ್ಣಿಸಿದರು.
ಪ್ರಮುಖ ನಾಯಕರ ಭಾಗಿ: ಈ ಬೃಹತ್ ಹೋರಾಟದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಜಿ. ಹೆಚ್. ತಿಪ್ಪಾರೆಡ್ಡಿ, ಶಾಸಕರುಗಳಾದ ಎಂ. ಚಂದ್ರಪ್ಪ, ಸುರೇಶ್ ಗೌಡ, ಜ್ಯೋತಿ ಗಣೇಶ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ. ಎಸ್. ನವೀನ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ಕೆ. ಟಿ. ಕುಮಾರಸ್ವಾಮಿ, ದಾವಣಗೆರೆ ಜಿಲ್ಲಾಧ್ಯಕ್ಷ ನಾಗರಾಜ್ ಮೆಲ್ಲಕಟ್ಟೆ, ಬಿ.ಸಿ ಹನುಮಂತೇಗೌಡ, ತುಮಕೂರು ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಸೇರಿದಂತೆ ಹಲವು ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಬೃಹತ್ ಪ್ರತಿಭಟನೆಯು ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಂದೋಲನದ ಭಾಗವಾಗಿದ್ದು, ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ನಾಯಕರು ಎಚ್ಚರಿಸಿದ್ದಾರೆ.




