ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಗದ್ದಲ ಉಂಟುಮಾಡಿದ ಆರೋಪದ ಮೇಲೆ ವಕೀಲರ ವಿರುದ್ಧ ದಾಖಲಾಗಿದ್ದ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಮುಕ್ತಾಯಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ಆರೋಪಿ ವಕೀಲರು ವಿಚಾರಣೆಯ ಆರಂಭದಲ್ಲೇ ಪ್ರಮಾಣಪತ್ರದ ಮೂಲಕ ಬೇಷರತ್ ಕ್ಷಮೆಯಾಚಿಸಿದ್ದರಿಂದ, ಅವರ ಕ್ಷಮೆಯ ಪ್ರಾಮಾಣಿಕತೆಯನ್ನು ಅನುಮಾನಿಸುವ ಅಗತ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.
ಪ್ರಮಾಣಪತ್ರವನ್ನು ಅಂಗೀಕರಿಸಿದ ನ್ಯಾಯಾಲಯ, ವಕೀಲರನ್ನು ಆರೋಪಮುಕ್ತಗೊಳಿಸಿ ಪ್ರಕರಣವನ್ನು ಇತ್ಯರ್ಥಪಡಿಸಿತು. ಇದೇ ವೇಳೆ, ಪ್ರತಿಭಟನೆಯ ಹೆಸರಿನಲ್ಲಿ ನ್ಯಾಯಾಲಯದ ಕಲಾಪಗಳಿಗೆ ಅಡ್ಡಿಪಡಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ಪ್ರಕರಣದ ಹಿನ್ನೆಲೆ: ರಾಜ್ಯದಲ್ಲಿ ವಕೀಲರ ಹತ್ಯೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಮತ್ತು 'ವಕೀಲರ ಮೇಲಿನ ದೌರ್ಜನ್ಯ ನಿಷೇಧ ಕಾಯ್ದೆ–2023'ರ ಸಮರ್ಪಕ ಜಾರಿಗೆ ಒತ್ತಾಯಿಸಿ ಬೆಂಗಳೂರು ವಕೀಲರ ಸಂಘ (ಎಎಬಿ) ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಈ ವೇಳೆ ಕೆಲ ವಕೀಲರು ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಹಾಲ್ ಪ್ರವೇಶಿಸಿ ಕಲಾಪಕ್ಕೆ ಅಡ್ಡಿಪಡಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ಸಿಸಿಟಿವಿ ದೃಶ್ಯಾವಳಿ ಆಧರಿಸಿ ತಪ್ಪಿತಸ್ಥರನ್ನು ಗುರುತಿಸುವಂತೆ ಸೂಚಿಸಿ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ವಕೀಲರ ಸಂಘದ ಬೇಡಿಕೆಗಳಿಗೆ ಇತರೆ ಪೀಠಗಳೂ ಸಹಮತ ವ್ಯಕ್ತಪಡಿಸಿದ್ದವು ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.




