ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಪಂಗಡದ ರೈತರ ಕೃಷಿ ಅಭಿವೃದ್ಧಿ ಹಾಗೂ ಆರ್ಥಿಕ ಸ್ವಾವಲಂಬನೆಗೆ ಗಂಗಾ ಕಲ್ಯಾಣ ಯೋಜನೆ ಮಹತ್ವದ ಕೊಡುಗೆ ನೀಡಲಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ತಿಳಿಸಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಪಂಪ್‍ಸೆಟ್ ಹಾಗೂ ಇತರೆ ಪೂರಕ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಫಲಾನುಭವಿಗಳಿಗೆ ಪಂಪ್‍ಸೆಟ್ ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆಯು ಪರಿಶಿಷ್ಟ ಪಂಗಡದ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಹತ್ವದ ಯೋಜನೆಯಾಗಿದೆ. ಪಂಪ್‍ಸೆಟ್ ಹಾಗೂ ಪೂರಕ ಸಾಮಗ್ರಿಗಳ ವಿತರಣೆಯಿಂದ ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಸುಗಮವಾಗಿ ಕೈಗೊಳ್ಳಲು ಅನುಕೂಲವಾಗಲಿದೆ. ಇದರಿಂದ ಕೃಷಿ ಉತ್ಪಾದನೆ ಹೆಚ್ಚುವುದರ ಜೊತೆಗೆ ರೈತ ಕುಟುಂಬಗಳ ಆರ್ಥಿಕ ಸ್ಥಿತಿಯೂ ಸುಧಾರಿಸಲಿದೆ ಎಂದು ವಿವರಿಸಿದರು.
ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಹಾಗೂ ಪರಿಶಿಷ್ಟ ಪಂಗಡದ ಜನರು ಆರ್ಥಿಕವಾಗಿ ಸಬಲರಾಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.




