ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಚಿತ್ರದುರ್ಗ ಉಪವಿಭಾಗದ ಉಪ ವಿಭಾಗಾಧಿಕಾರಿ ಡಾ. ಕೆ.ಜೆ.ಕಾಂತರಾಜ್ ಸೂಚಿಸಿದರು.
ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಉಪವಿಭಾಗ ಮಟ್ಟದ ದೌರ್ಜನ್ಯ ತಡೆ ಮತ್ತು ಉಸ್ತುವಾರಿ ನಿಗಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಪವಿಭಾಗ ಮಟ್ಟದಲ್ಲಿ ಸಂಭವಿಸಿರುವ ದೌರ್ಜನ್ಯ ಪ್ರಕರಣಗಳು ಕುರಿತು ಪೊಲೀಸ್ ಇಲಾಖೆಯಿಂದ ನಿಖರ ಮಾಹಿತಿ ಪಡೆದುಕೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾದ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಧನ ಹಾಗೂ ತಕ್ಷಣದ ಪರಿಹಾರ ಕ್ರಮಗಳು ವಿಳಂಬವಿಲ್ಲದೆ ವೇಗವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ಸಮುದಾಯದ ಜನರಿಗೆ ಕಾಯಿದೆಗಳ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಾಗಾರಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪಿ, ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಚಿತ್ರದುರ್ಗ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ನಾಮನಿರ್ದೇಶಿತ ಸದಸ್ಯರಾದ ರವಿಕುಮಾರ್ ಬ್ಯಾಲ್‍ಹಾಳ್, ಬೋರಯ್ಯ, ಸುರೇಂದ್ರನಾಥ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.



