ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಚರ್ಚೆಗಳ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ವಿಜಯೇಂದ್ರ ಅವರು, ಅಮಿತ್ ಶಾ ಅವರೊಂದಿಗೆ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು, ವಿಧಾನ ಪರಿಷತ್ ಚುನಾವಣಾ ಫಲಿತಾಂಶ, ಹಿರಿಯೂರು ಉಪಚುನಾವಣೆ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಸವಿಸ್ತಾರವಾಗಿ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಭೇಟಿಯ ಆಂತರಿಕ ವಿಚಾರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ ಅವರು, ವರಿಷ್ಠರೊಂದಿಗಿನ ಈ ಮಾತುಕತೆಯು ತಮ್ಮ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿಕೊಂಡಿದ್ದಾರೆ.
ಹಿರಿಯೂರು ಉಪಚುನಾವಣೆಯ ಮೈತ್ರಿ ಟಿಕೆಟ್ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಉತ್ತಮ ಅವಕಾಶವಿದ್ದು, ಯಾವುದೇ ಗೊಂದಲವಿಲ್ಲದೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದರು. ಮಿತ್ರ ಪಕ್ಷ ಜೆಡಿಎಸ್ ಟಿಕೆಟ್ ಕೇಳುವುದು ಸಹಜವಾಗಿದ್ದು, ನಮಗೆ ಟಿಕೆಟ್ ವಿಚಾರದಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ; ಬದಲಾಗಿ ಚುನಾವಣೆ ಗೆಲ್ಲುವುದೇ ನಮ್ಮ ಏಕೈಕ ಗುರಿ ಎಂದು ಸ್ಪಷ್ಟಪಡಿಸಿದರು. ರಾಜ್ಯದ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಈಗಾಗಲೇ ಅಮಿತ್ ಶಾ ಅವರಿಗೆ ತಲುಪಿಸಲಾಗಿದ್ದು, ವರಿಷ್ಠರು ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ವಿಜಯೇಂದ್ರ ವಿವರಿಸಿದ್ದಾರೆ.




