ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ಪ್ರತಿಷ್ಠಿತ “ಬಸವ ಶ್ರೀ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಬಸವ ವೇದಿಕೆಯ ಆಶ್ರಯದಲ್ಲಿ ಕಳೆದ ಏಪ್ರಿಲ್ 27 ರಂದು ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಹೆಚ್.ಡಿ. ದೇವೇಗೌಡರಿಗೆ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅಂದು ಕಾರ್ಯಕ್ರಮಕ್ಕೆ ಹಾಜರಾಗಲು ಅವರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೇ ತೆರಳಿ ಪ್ರಶಸ್ತಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಹಲವಾರು ಪ್ರಮುಖರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು:
ಬಸವ ವೇದಿಕೆ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಉಪಾಧ್ಯಕ್ಷ ಎಸ್. ಷಡಕ್ಷರಿ, ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ಪಕ್ಷದ ಉಪಾಧ್ಯಕ್ಷ ಹಾಗೂ ಸಮಿತಿ ಸದಸ್ಯ ಬಿ.ಎಂ. ಉಮೇಶ್ ಕುಮಾರ್ ಮತ್ತಿತರ ನಾಯಕರು ಇದ್ದರು.
ಬಸವ ತತ್ವದ ಹಾದಿಯಲ್ಲಿ ನಾಡಿಗೆ ಸೇವೆ ಸಲ್ಲಿಸಿದ ಹಿರಿಯ ಚೇತನಕ್ಕೆ ಈ ಗೌರವ ಸಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.


