ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ ಹಾಗೂ ವಿರೋಧ ಪಕ್ಷಗಳ ನಡುವಿನ ಕಾದಾಟ ತೀವ್ರಗೊಂಡಿದೆ.
ಈ ನಿರ್ಣಾಯಕ ಕಾನೂನು ಸಂಘರ್ಷದ ನಡುವೆಯೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭಗವಾನ್ ಮಹಾದೇವನ ಫೋಟೋವನ್ನು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಹಂಚಿಕೊಂಡು "ಸತ್ಯಂ ಶಿವಂ ಸುಂದರಂ" ಎಂದು ಶೀರ್ಷಿಕೆ ನೀಡಿರುವುದು ಭಾರಿ ಗಮನಸೆಳೆದಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿರ್ಧಾರಗಳು ಹಾಗೂ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸುತ್ತಿದೆ.
ಇನ್ನೊಂದೆಡೆ, ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪ್ರತಿ-ಅಫಿಡವಿಟ್ನಲ್ಲಿ ಆಯೋಗವು ತನ್ನ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ಜೂನ್ 2025, ಅಕ್ಟೋಬರ್ 2025 ಮತ್ತು ಮೇ 2026 ರಲ್ಲಿ ಹೊರಡಿಸಲಾದ ಎಸ್ಐಆರ್ ಆದೇಶಗಳನ್ನು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು (ಸುಖಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ) ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಆಯೋಗ ಸ್ಪಷ್ಟಪಡಿಸಿದೆ.



