ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ತಾಲೂಕಿನ ಬಸಗೂಡು ಗ್ರಾಮದಲ್ಲಿ ಕಾಫಿ ಎಸ್ಟೇಟ್ ಮಾಲೀಕ ಭರತ್ ಎಂಬಾತ ಒಂದು ಕೈಯಲ್ಲಿ ಬಂದೂಕು ಹಾಗೂ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ತಮಿಳುನಾಡು ಮೂಲದ ವಲಸೆ ಕಾರ್ಮಿಕರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಂಗಡ ಹಣವನ್ನು ವಾಪಸ್ ನೀಡಿ ಬೇರೆಡೆ ಕೆಲಸಕ್ಕೆ ಹೋಗುವುದಾಗಿ ಕಾರ್ಮಿಕರು ತಿಳಿಸಿದ್ದೇ ಈ ಹಲ್ಲೆಗೆ ಕಾರಣ ಎನ್ನಲಾಗಿದೆ. ತಮ್ಮನ್ನು ಜೀತದಾಳುಗಳಂತೆ ಕೂಡಿಹಾಕಿ, ಮಹಿಳೆಯರು ಹಾಗೂ ಮಕ್ಕಳೆನ್ನದೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಸಂತ್ರಸ್ತರು ಗಂಭೀರ ಆರೋಪ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿ ಆರೋಪಿಯು 4 ರಿಂದ 5 ಕಾರ್ಮಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ನೆಲಕ್ಕೆ ಬಿದ್ದ ಮಹಿಳೆಯ ಮೇಲೂ ದೊಣ್ಣೆಯಿಂದ ಥಳಿಸಿ ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಿರುವುದು ಸೆರೆಯಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಮಹಿಳಾ ಕಾರ್ಮಿಕರಾದ ಮೀನಾ ಅವರು ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಲಾಟೆಯ ವೇಳೆ ತಮ್ಮ ಚಿನ್ನದ ಕಿವಿಯೋಲೆ ಕಾಣೆಯಾಗಿದೆ ಎಂದು ದೂರಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚುವರಿ ಎಸ್ಪಿ ಜಯಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ತಿಳಿಸಿದ್ದಾರೆ.




