ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ಕರೆಯದೆ, ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಭದ್ರಾ ನಾಲೆಗೆ ನೀರು ಹರಿಸಲು ಮುಂದಾಗಿರುವುದನ್ನು ಖಂಡಿಸಿ ಹೊನ್ನಾಳಿ ಶಾಸಕ ಶಾಂತನಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ದಿನಗಳ ಕಾಲ ನಿತ್ಯ 1,000 ಕ್ಯೂಸೆಕ್ನಂತೆ 1 ಟಿಎಂಸಿ ನೀರು ಹರಿಸುವ ಸರ್ಕಾರದ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ರೀತಿ ನೀರು ಹರಿಸಿದರೆ ಅಣೆಕಟ್ಟಿನಿಂದ ಕೇವಲ 15 ಕಿ.ಮೀ ವ್ಯಾಪ್ತಿಯ, ಅಂದರೆ ಭದ್ರಾವತಿ ತಾಲ್ಲೂಕಿನ ರೈತರಿಗೆ ಮಾತ್ರ ಅನುಕೂಲವಾಗಲಿದ್ದು, ಉಳಿದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗಲಿದೆ ಎಂದು ದೂರಿದರು.
ಭದ್ರಾ ಜಲಾಶಯ ಕೇವಲ ಭದ್ರಾವತಿಯ ಆಸ್ತಿಯಲ್ಲ. ತಕ್ಷಣವೇ ನೀರು ಹರಿಸುವುದನ್ನು ಸ್ಥಗಿತಗೊಳಿಸಿ, ತುರ್ತಾಗಿ ಐಸಿಸಿ ಸಭೆ ಕರೆದು ವೈಜ್ಞಾನಿಕ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಇಂದೇ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಜಲಾಶಯದ ಮುಂಭಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.




