ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಮತ್ತಷ್ಟು ಬಲಪಡಿಸುವ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭಾ ಉಪಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಪಕ್ಷದ ಎಲ್ಲಾ ಜಿಲ್ಲಾಧ್ಯಕ್ಷರುಗಳ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನಾತ್ಮಕ ಬಲವರ್ಧನೆ ಹಾಗೂ ಮುಂದಿನ ಚುನಾವಣಾ ಕಾರ್ಯತಂತ್ರಗಳ ಕುರಿತು ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು.
ಪಕ್ಷ ಸಂಘಟನೆಗೆ ಒತ್ತು: ಪ್ರತಿ ಜಿಲ್ಲೆಯಲ್ಲೂ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು, ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವುದು ಮತ್ತು ಸದಸ್ಯತ್ವ ಅಭಿಯಾನಕ್ಕೆ ವೇಗ ನೀಡುವ ಕುರಿತು ಜಿಲ್ಲಾಧ್ಯಕ್ಷರಿಗೆ ಕುಮಾರಸ್ವಾಮಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಜಿ.ಪಂ ಹಾಗೂ ತಾ.ಪಂ ಚುನಾವಣಾ ತಯಾರಿ: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಈಗಿನಿಂದಲೇ ಕ್ಷೇತ್ರವಾರು ಸಿದ್ಧತೆಗಳನ್ನು ಆರಂಭಿಸುವಂತೆ ಸೂಚಿಸಲಾಯಿತು. ಸ್ಥಳೀಯ ಮಟ್ಟದಲ್ಲಿ ಮೈತ್ರಿ ಪಕ್ಷವಾದ ಬಿಜೆಪಿಯೊಂದಿಗೆ ಸಮನ್ವಯ ಸಾಧಿಸಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಲಾಯಿತು.
ಹಿರಿಯೂರು ಉಪಚುನಾವಣೆ ರಣತಂತ್ರ: ತೀವ್ರ ಕುತೂಹಲ ಕೆರಳಿಸಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುವ ಬಗ್ಗೆ ಸಭೆಯಲ್ಲಿ ವಿಶೇಷ ಸಮಾಲೋಚನೆ ನಡೆಸಲಾಯಿತು. ಟಿಕೆಟ್ ಹಂಚಿಕೆ ವಿಚಾರದಲ್ಲಿ ವರಿಷ್ಠರು ಕೈಗೊಳ್ಳುವ ಅಂತಿಮ ನಿರ್ಧಾರಕ್ಕೆ ಬದ್ಧರಾಗಿ, ಮೈತ್ರಿ ಧರ್ಮದಂತೆ ಒಗ್ಗಟ್ಟಿನಿಂದ ಕೆಲಸ ಮಾಡಲು ತೀರ್ಮಾನಿಸಲಾಯಿತು.
ಸರ್ಕಾರದ ವಿರುದ್ಧ ಹೋರಾಟ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳು, ಬೆಲೆ ಏರಿಕೆ ಹಾಗೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸುವ ಮೂಲಕ ಜನರ ವಿಶ್ವಾಸ ಗಳಿಸುವಂತೆ ನಾಯಕರಿಗೆ ಕರೆ ನೀಡಲಾಯಿತು.
ಸಭೆಯಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಅಧ್ಯಕ್ಷರು ಭಾಗವಹಿಸಿ ತಮ್ಮ ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಕುರಿತು ವರದಿ ನೀಡಿದರು.




