ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ಸಾಹಿತ್ಯ, ಭಕ್ತಿ ಪರಂಪರೆ, ಸಾಮಾಜಿಕ ಚಿಂತನೆಗೆ ಕನಕದಾಸರ ಕೊಡುಗೆ ಅನನ್ಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ
ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಭಕ್ತಿ, ಮಾನವೀಯತೆ, ಸಮಾನತೆ, ಆತ್ಮಜ್ಞಾನ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರಿದರು. ದಾಸ ಸಾಹಿತ್ಯಕ್ಕೆ ವಿಶಿಷ್ಟವಾದ ತಾತ್ವಿಕ ಮತ್ತು ಸಾಮಾಜಿಕ ಆಯಾಮವನ್ನು ನೀಡಿದರು. ಅವರ ಕೀರ್ತನೆಗಳು ಸರಳವಾದ ಭಾಷೆಯಲ್ಲಿದ್ದರೂ ಆಳವಾದ ಜೀವನದರ್ಶನವನ್ನು ಒಳಗೊಂಡಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಕನಕದಾಸರು ಭಕ್ತಕವಿಗಳಷ್ಟೇ ಅಲ್ಲ ಸಾಮಾಜಿಕ ಪ್ರಜ್ಞೆಯುಳ್ಳ ಮಹಾನ್ ಚಿಂತಕರು.
ಅವರ ಸಾಹಿತ್ಯವು ಕನ್ನಡ ನಾಡಿನ ಜನರ ಬದುಕು, ಧಾರ್ಮಿಕ ಪರಂಪರೆ, ಸಾಮಾಜಿಕ ಸಂಘರ್ಷ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಕನಕದಾಸರ ಸಾಮಾಜಿಕ ಚಿಂತನೆ ಇಂದಿಗೂ ಪ್ರಸ್ತುತವಾಗಿವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಜನಸಾಮಾನ್ಯರು ಅರ್ಥ ಮಾಡಿಕೊಳ್ಳಲು ಸಹಕಾರಿ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಜಿ.ಸುರೇಶ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಪ್ರತಿನಿಧಿಗಳಾದ ಅಣ್ಣಯ್ಯ, ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಇಸ್ತೂರು ರಂಗಸ್ವಾಮಯ್ಯ, ಷಫೀರ್, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.




