ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಮುಂದುವರೆಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನೇಮಕಾತಿ ಪರೀಕ್ಷೆಯ ಅಕ್ರಮಗಳ ಕುರಿತು ಪ್ರಮುಖ ವಿಚಾರಣೆ ನಡೆಸಿದೆ.
ಅಂದು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು RDPR ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಪ್ರಿಯಾಂಕ್ ಖರ್ಗೆ ಮೇಲಿನ ಆರೋಪಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಪರೀಕ್ಷೆಯಲ್ಲಿ OMR ಶೀಟ್ ತಿದ್ದುಪಡಿ ಮಾಡಲಾಗಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಸಾಹುಕಾರ್, ಜ್ಞಾನೇಂದ್ರ ಹಾಗೂ ಗೀತಾ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ಆದರೆ, ವಿಚಾರಣೆ ವೇಳೆ ಅವರು "ಅಕ್ರಮ ನಡೆದಿರುವುದು ಮಾತ್ರ ನಮಗೆ ಗೊತ್ತು" ಎಂದು ಹಾರಿಕೆ ಉತ್ತರ ನೀಡಿರುವುದಾಗಿ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.




