ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರದ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಛಲವಾದಿ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡದೆ ಕಡೆಗಣಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಛಲವಾದಿ ಸಮಾಜದ ಮುಖಂಡ ಎಸ್.ಎನ್. ರವಿಕುಮಾರ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, "ನಾನು ಕೆಪಿಸಿಸಿ ಕೋ-ಆರ್ಡಿನೇಟರ್ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷನಾಗಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುತ್ತಿದ್ದೇನೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆಲ್ಲುವಲ್ಲಿಯೂ ಸೇರಿದಂತೆ, ಇದುವರೆಗಿನ ಎಲ್ಲಾ ಚುನಾವಣೆಗಳಲ್ಲಿಯೂ ನಮ್ಮ ಸಮಾಜವು ಪಕ್ಷದ ಗೆಲುವಿಗೆ ಶ್ರಮಿಸಿದೆ" ಎಂದು ತಿಳಿಸಿದ್ದಾರೆ.
"ಆದರೆ, ಜಿಲ್ಲೆಯ ಯಾವೊಬ್ಬ ನಿಷ್ಠಾವಂತ ಕಾರ್ಯಕರ್ತನಿಗೂ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ಸಿಗದಿರುವುದು ವಿಷಾದನೀಯ.
ಪಕ್ಷದ ವರಿಷ್ಠರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆಗಿರುವ ಲೋಪವನ್ನು ಸರಿಪಡಿಸುವ ಮೂಲಕ ಛಲವಾದಿ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು" ಎಂದು ಎಸ್.ಎನ್. ರವಿಕುಮಾರ್ ಅವರು ಒತ್ತಾಯಿಸಿದ್ದಾರೆ.




