ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜಿಲ್ಲೆಯ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಭದ್ರಾ ಜಲಾಶಯದಿಂದ ತಕ್ಷಣವೇ 2 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಚಿತ್ರದುರ್ಗ ಜಿಲ್ಲೆಗೆ 12.5 ಟಿಎಂಸಿ ನೀರಿನ ಹಂಚಿಕೆಯಿದ್ದರೂ, ಸದ್ಯದ ನೀರಿನ ಲಭ್ಯತೆಯ ಪ್ರಮಾಣಕ್ಕೆ ಅನುಗುಣವಾಗಿ 9.3 ಟಿಎಂಸಿ ನೀರು ದೊರೆಯಬೇಕಿದೆ. ಈ ಪೈಕಿ ಈಗಾಗಲೇ 4 ಟಿಎಂಸಿ ನೀರು ಮಾತ್ರ ಹರಿಸಲಾಗಿದೆ. ತುಂಗಾನದಿಯಿಂದ ಲಿಫ್ಟ್ ಮೂಲಕ ನೀರು ಹರಿಸುವ ಕಾಮಗಾರಿ ಪೂರ್ಣಗೊಳ್ಳುವವರೆಗೆ, ತಾತ್ಕಾಲಿಕವಾಗಿ 2 ಟಿಎಂಸಿ ನೀರನ್ನು ತುರ್ತಾಗಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜಿಲ್ಲೆಯಲ್ಲಿ ಈಗಾಗಲೇ ಆರು ಗೋಶಾಲೆಗಳನ್ನು ಆರಂಭಿಸಲಾಗಿದೆ. ಹಿರಿಯೂರು ತಾಲ್ಲೂಕಿನ ಕರಿಯಾಲ ಸೇರಿ ಚಳ್ಳಕೆರೆಯಲ್ಲಿ 4 ಹಾಗೂ ಚಿತ್ರದುರ್ಗ ತಾಲ್ಲೂಕಿನಲ್ಲಿ ಒಂದು ಗೋಶಾಲೆ ಕಾರ್ಯಾರಂಭ ಮಾಡಿವೆ ಎಂದು ತಿಳಿಸಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ನಾಲ್ಕು ಹೋಬಳಿಗಳಲ್ಲಿ ರೂ.2,450 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಕ್ಷೇತ್ರವನ್ನು 'ಕನಕಪುರ ಮಾದರಿಯಲ್ಲಿ' ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಗ್ಯಾರಂಟಿ ಯೋಜನೆಗಳ ಜೊತೆಗೆ ನೀರಾವರಿ, ರಸ್ತೆ, ವಸತಿ ಹಾಗೂ ಮೂಲಸೌಕರ್ಯಗಳಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಜಿಲ್ಲೆಯ 3 ಲಕ್ಷ ರೈತರ ಪೈಕಿ 2.5 ಲಕ್ಷ ರೈತರು ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಶೀಘ್ರದಲ್ಲೇ ಪರಿಹಾರದ ಮೊತ್ತ ಬಿಡುಗಡೆಯಾಗಲಿದೆ. ಅಲ್ಲದೆ, ಬರ ಪರಿಹಾರವಾಗಿ ಸರ್ಕಾರದಿಂದ ರೈತರಿಗೆ ರೂ.5,000 ಆರ್ಥಿಕ ನೆರವು ನೀಡಲಾಗಿದೆ ಎಂದರು.
ಪ್ರಜಾಸೇವಾ ಆಂದೋಲನ ಕೇವಲ ನೆಪಮಾತ್ರದ ಕಾರ್ಯಕ್ರಮವಲ್ಲ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಪ್ರತ್ಯೇಕ ಖಾತೆ ಹಾಗೂ ಪ್ರಧಾನ ಕಾರ್ಯದರ್ಶಿಗಳ ಮೇಲ್ವಿಚಾರಣೆಯಲ್ಲಿ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದು ಸಚಿವರು ಹೇಳಿದರು.




