ಚಂದ್ರವಳ್ಳಿ ನ್ಯೂಸ್, ಆನೇಕಲ್:
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ, ಆನೇಕಲ್ ಟೌನ್ನ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಬಿಜೆಪಿ–ಜೆಡಿಎಸ್ ನೇತೃತ್ವದ ಎನ್ಡಿಎ ಮೈತ್ರಿಕೂಟದ ಮಹತ್ವದ ಚುನಾವಣಾ ಸಿದ್ಧತಾ ಸಭೆಯು ಯಶಸ್ವಿಯಾಗಿ ನಡೆಯಿತು.
ಹಿರಿಯ ನಾಯಕ ಆರ್. ಅಶೋಕ್ ಅವರು ಈ ಸಭೆಯಲ್ಲಿ ಭಾಗವಹಿಸಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಪ್ರಮುಖವಾಗಿ ಶಿಕ್ಷಕರ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಅವರ ಹಿತಾಸಕ್ತಿಗಳನ್ನು ಕಾಪಾಡುವುದು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಚುನಾವಣಾ ಕಾರ್ಯತಂತ್ರಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಎನ್ಡಿಎ ಮೈತ್ರಿಕೂಟದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ, ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯನ್ನು ಭರ್ಜರಿಯಾಗಿ ಗೆಲ್ಲಿಸಲು ಈ ಸಂದರ್ಭದಲ್ಲಿ ದೃಢಸಂಕಲ್ಪ ಮಾಡಿದರು.
ಈ ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಎ. ಪಿ. ರಂಗನಾಥ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನಪ್ರಿಯ ಸಂಸದ ಸಿ. ಎನ್. ಮಂಜುನಾಥ್, ಮಾಜಿ ಸಂಸದ ಎ. ನಾರಾಯಣ ಸ್ವಾಮಿ ಸೇರಿದಂತೆ ಎನ್ಡಿಎ ಮೈತ್ರಿಕೂಟದ ಹಲವಾರು ಪ್ರಮುಖ ನಾಯಕರು, ಸ್ಥಳೀಯ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.




