ಚಂದ್ರವಳ್ಳಿ ನ್ಯೂಸ್, ಶಿಕಾರಿಪುರ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 'ನಶೆ ಮುಕ್ತ ಭಾರತ' ಅಭಿಯಾನದ ಕರೆಗೆ ಬೆಂಬಲವಾಗಿ ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೋಸ್ಟರ್ ಬಿಡುಗಡೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಪಾಲ್ಗೊಂಡರು.
ಶಿವಮೊಗ್ಗ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಕುಮಾರಿ ಅನುಸೂಯಕ್ಕ ಹಾಗೂ ರಾಜಯೋಗಿನಿ ಬ್ರಹ್ಮಕುಮಾರಿ ಸ್ನೇಹಕ್ಕ ಅವರ ಸಾನ್ನಿಧ್ಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಯುವಜನರೇ ದೇಶದ ಶಕ್ತಿ:
ಕಾರ್ಯಕ್ರಮದಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, "ಯುವಜನರೇ ನಮ್ಮ ದೇಶದ ನಿಜವಾದ ಶಕ್ತಿ. ದುಷ್ಟ ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಸುದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ವಿದ್ಯಾರ್ಥಿಯೂ ದೃಢಸಂಕಲ್ಪ ತೊಡಬೇಕು. ಈ ಮೂಲಕ ಪ್ರಧಾನಿಗಳ 'ವಿಕಸಿತ ಭಾರತ'ದ ಕನಸನ್ನು ಸಾಕಾರಗೊಳಿಸಲು ಶ್ರಮಿಸಬೇಕು" ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ. ಶಿವಕುಮಾರ್, ಡಾ. ವೀರೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ಎಸ್. ಗುರುಮೂರ್ತಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.



